Thursday, November 21, 2024
Google search engine
Homeಮುಖಪುಟಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಫೆ.7ರಂದು ದೆಹಲಿಯಲ್ಲಿ ಕಾಂಗ್ರೆಸ್ ಶಾಸಕರ ಪ್ರತಿಭಟನೆ

ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಫೆ.7ರಂದು ದೆಹಲಿಯಲ್ಲಿ ಕಾಂಗ್ರೆಸ್ ಶಾಸಕರ ಪ್ರತಿಭಟನೆ

ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಫೆಬ್ರವರಿ 07ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕರು, ಸಂಸದರು, ನಾಯಕರಿಗೂ ಈ ಮೂಲಕ ನಾವು ಪ್ರತಿಭಟನೆಗೆ ಕರೆ ಕೊಡುತ್ತಿದ್ದೇವೆ. ನಾವು ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡುತ್ತಿಲ್ಲ. ರಾಜ್ಯದ ಪರವಾಗಿ ಪ್ರತಿಭಟಿಸುತ್ತಿದ್ದೇವೆ. ನೀವೂ ರಾಜ್ಯದ ಜನರ ಧ್ವನಿಯಾಗಿ, ರಾಜ್ಯದ ಜನರ ಪರವಾಗಿ ನಿಲ್ಲಿ ಎಂದು ಬಿಜೆಪಿಯವರಿಗೆ ಕರೆ ಕೊಡುತ್ತೇವೆ. ಕನ್ನಡಿಗರಿಗೆ ದ್ರೋಹ ಮಾಡಬೇಡಿ, ಬನ್ನಿ ರಾಜ್ಯದ ಪರವಾಗಿ ಧ್ವನಿ ಎತ್ತೋಣ ಎಂದು ಕರೆಯುತ್ತಿದ್ದೇವೆ. ಪ್ರತಿಭಟಿಸದೆ ಸುಮ್ಮನಿದ್ದರೆ ಕನ್ನಡಿಗರಿಗೆ ದ್ರೋಹ ಮಾಡಿದಂತಾಗುತ್ತದೆ ಎಂದು ತಿಳಿಸಿದರು.

ರಾಜ್ಯದ ಜನತೆ ನಮಗೆ ಕೊಟ್ಟ ಅವಕಾಶಕ್ಕೆ ನ್ಯಾಯ ಒದಗಿಸಬೇಕಾದುದ್ದು ನಮ್ಮ ಕರ್ತವ್ಯ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ನ್ಯಾಯ ಒದಗಿಸಿಕೊಡಲಿದೆ ಎಂದು ಇಲ್ಲಿಯವರೆಗೂ ತಾಳ್ಮೆಯಿಂದ ಕಾಯುತ್ತಿದ್ದೆವು. ಕಳೆದ ಸಾಲಿನ ಬಜೆಟ್ ನಲ್ಲಿ ಹೇಳಿದಂತೆ ನಡೆದುಕೊಳ್ಳುತ್ತಾರೆ ಎಂದು ಕಾದಿದ್ದೆವು. ಆದರೆ ಇದುವರೆಗೂ ಅನ್ಯಾಯ ಸರಿ ಪಡಿಸಿಲ್ಲ. ಇದರ ವಿರುದ್ಧ ಧ್ವನಿ ಎತ್ತಲೇಬೇಕಾಗಿದೆ. ಹೋರಾಟಕ್ಕೆ ಜೊತೆ ನೀಡಲು ಇಡೀ ಸರ್ಕಾರ ಪಕ್ಷ ಭೇದ ಮರೆತು ಆಹ್ವಾನ ನೀಡಿದ್ದೇವೆ. ಕನ್ನಡಿಗರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕಿದೆ. ಕೇಂದ್ರದ ಕಿವಿಯನ್ನು ತೆರೆಸಲು ಹೋರಾಡುತ್ತಿದ್ದೇವೆ ಎಂದರು.

ಭದ್ರಾ ಯೋಜನೆಗೆ 5,300 ಕೋಟಿ ಕೊಡುತ್ತೇವೆ ಎಂದು ಕಳೆದ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿ ಈವರಗೆ ಒಂದು ರೂ. ಕೂಡ ಬಿಡುಗಡೆ ಮಾಡಿಲ್ಲ. ಬರ ಪರಿಹಾರದ ಹಣವೂ ಇಲ್ಲ. ನರೇಗಾ ಅಡಿ 150 ಮಾನವ ದಿನಗಳಿಗೆ ಕೂಲಿ ಕೊಡಲು ಕೂಡ ಅನುಮತಿ ನೀಡಿಲ್ಲ. ಇಂಥ ಹಲವು ಕಾರಣಗಳಿಗಾಗಿ ಅನಿವಾರ್ಯವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಒಕ್ಕೂಟ ವ್ಯವಸ್ಥೆಯಲ್ಲಿ ಸಂವಿಧಾನದ ಮೂಲಕ ಕೇಂದ್ರ ಮತ್ತು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸೇರಿ ಜನರ ಸೇವೆಯನ್ನು ಮಾಡಲು ಒಪ್ಪಿಕೊಂಡಿದ್ದೇವೆ. ಕೇಂದ್ರ ಸರ್ಕಾರದ ತೆರಿಗೆ ಹಣವೆಂದರೆ ರಾಜ್ಯಗಳಿಂದ ಬರುವ ತೆರಿಗೆ ಹಣ, ಸೆಸ್, ಪೆಟ್ರೋಲ್ ಡೀಸೆಲ್, ಸರ್ಚಾರ್ಜ್. ಇವುಗಳಿಂದ ಸಂಗ್ರಹವಾಗುವ ಹಣವನ್ನು ಕೇಂದ್ರ ಮತ್ತು ರಾಜ್ಯಗಳಿಗೆ ಹಂಚಿಕೆಯಾಗಬೇಕೆಂದು ಹಣಕಾಸು ಆಯೋಗ ರಚನೆಯಾಗಿದೆ. ಸಂವಿಧಾನದ 7ನೇ ಪರಿಚ್ಛೇಧ ಅದನ್ನು ಸ್ವತಂತ್ರ ಸಂಸ್ಥೆಯಾಗಿಸಿದೆ. ಇಲ್ಲಿಯವರೆಗೆ 15 ಹಣಕಾಸು ಆಯೋಗಗಳು ಆಗಿವೆ. ಪ್ರಸ್ತುತ 16ನೇ ಹಣಕಾಸು ಆಯೋಗ ರಚನೆಯಾಗಿದ್ದು, ಅಧ್ಯಕ್ಷರ ನೇಮಕವಾಗಿದೆ ಎಂದರು.

14ನೇ ಹಣಕಾಸು ಆಯೋಗದಲ್ಲಿ ರಾಜ್ಯದ ತೆರಿಗೆಯ ಪಾಲು ಶೇ 4.71% ಇದ್ದದ್ದು, 15ನೇ ಹಣಕಾಸು ಆಯೋಗದಲ್ಲಿ 3.64% ಗೆ ಇಳಿಕೆಯಾಯಿತು. ಅಂದರೆ ಶೇ 1.07% ಕಡಿಮೆಯಾಗಿದೆ. ಅದರಿಂದ 4 ವರ್ಷಗಳಲ್ಲಿ 45,000 ಕೋಟಿ ರೂ. ರಾಜ್ಯಕ್ಕೆ ಕಡಿತ ಆಯಿತು. ಇದು ಕೇವಲ ನಗದು ಹಂಚಿಕೆಯೊಂದರಲ್ಲೇ ಆಗಿರುವ ಅನ್ಯಾಯ. ಅಂದಾಜಿನ ಪ್ರಕಾರ ಈ ವರ್ಷ ನಗದು ಹಂಚಿಕೆಯಲ್ಲಿ 62,098 ಕೋಟಿ ರೂ.ಗಳು ಕರ್ನಾಟಕಕ್ಕೆ ಕಡಿಮೆಯಾಗಲಿದೆ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular