ಬಾಂಬ್ ಸ್ಪೋಟಿಸಿ 9 ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಮಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಪೋಟದಲ್ಲಿ ಒಂಬತ್ತು ಮಂದಿ ಗಾಯಗೊಂಡಿದ್ದು ಅವರಲ್ಲಿ ಮೂವರು ಹೋಟೆಲ್ ಸಿಬ್ಬಂದಿಯೆಂದು ಗುರುತಿಸಲಾಗಿದೆ. ಉಳಿದ 6 ಮಂದಿ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುವ ಸಿಬ್ಬಂದಿ ಎಂದು ಗುರುತಿಸಲಾಗಿದೆ.
ವ್ಯಕ್ತಿಯೊಬ್ಬ ಬ್ಯಾಗ್ ತಂದು ಅದನ್ನು ಡಸ್ಟ್ ಬಿನ್ ಬಳಿ ಇಟ್ಟಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಸ್ಪೋಟಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಸ್ಥಳಕ್ಕೆ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ, ಎಫ್ಎಸ್ಎಲ್ ತಜ್ಞರು, ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಭೇಟಿ ನೀಡಿದ್ದು ವಿವಿಧ ಆಯಾಮಗಳಿಂದ ಪರಿಶೀಲನೆ ನಡೆಸಿದ್ದಾರೆ.
ಪೊಲೀಸ್ ಅಧಿಕಾರಿ ಅಲೋಕ್ ಮೋಹನ್ ಮಾತನಾಡಿ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟವಾಗಿದೆ. ಸ್ಪೋಟದಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ತುಮಕೂರು ಜಿಲ್ಲೆ ಕುಣಿಗಲ್ ನಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ನಮ್ಮ ಪೊಲೀಸ್ ಆದಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಮಾಹಿತಿ ಪಡೆಯುತ್ತೇನೆ. ನಾನು ನಾಳೆ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ.