ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದಿದೆ. ಈ ಅವಧಿಯಲ್ಲಿ ನಮ್ಮ ಸರ್ಕಾರ ಚುನಾವಣಾ ಸಂದರ್ಭದಲ್ಲಿ ನೀಡಿದ್ದ 5 ಗ್ಯಾರಂಟಿ ಯೋಜನೆಯ ಭರವಸೆಯನ್ನು ಈಡೇರಿಸಿದೆ. ಈ ಗ್ಯಾರಂಟಿ ಯೋಜನೆಗಳಿಗಾಗಿ 36 ಸಾವಿರ ಕೋಟಿ ರೂ. ಹಣ ಖರ್ಚು ಮಾಡಿದ್ದೇವೆ. ಹೀಗಾಗಿ ಈ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ನಮ್ಮ ಕೈ ಹಿಡಿಯುತ್ತಾರೆ ಎಂಬ ವಿಶ್ವಾಸ ನಮ್ಮಲ್ಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸ್ಮಾರ್ಟ್ಸಿಟಿ ವತಿಯಿಂದ ಹಮ್ಮಿಕೊಂಡಿದ್ದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.
ನಮ್ಮ ಪಕ್ಷದಲ್ಲಿ ಇನ್ನು 21 ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕಿದೆ. ಈ ಸಂಬಂಧ ಈಗಾಗಲೇ ಅಂತಿಮ ಸುತ್ತಿನ ಚರ್ಚೆ ನಡೆದು ಅಭ್ಯರ್ಥಿಗಳ ಹೆಸರುಗಳನ್ನು ಶಿಫಾರಸ್ಸು ಸಹ ಮಾಡಲಾಗಿದೆ. ಕೇಂದ್ರ ಚುನಾವಣಾ ಕಮಿಟಿ ಮುಂದೆ ಕೆಪಿಸಿಸಿ ಅಧ್ಯಕ್ಷರು ಹಾಗ ರಾಜ್ಯ ಉಸ್ತುವಾರಿಗಳು ಅಭ್ಯರ್ಥಿಗಳ ಹೆಸರುಗಳನ್ನು ಮಂಡಿಸುತ್ತಾರೆ. ಇನ್ನೆರಡು ದಿನಗಳಲ್ಲಿ ಟಿಕೆಟ್ ಪಟ್ಟಿ ಘೋಷಣೆಯಾಗಲಿದೆ ಎಂದರು.
ರಾಜ್ಯಕ್ಕೆ ರಾಹುಲ್ಗಾಂಧಿ ಭೇಟಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ರಾಹುಲ್ಗಾಂಧಿಯವರ ಷೆಡ್ಯುಲ್ ಪಟ್ಟಿ ಇನ್ನು ಬಿಡುಗಡೆಯಾಗಿಲ್ಲ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದಲ್ಲಿ ಪ್ರಚಾರ ಮಾಡುತ್ತಾರೆ. ಆದರೆ ಅವರ ಷೆಡ್ಯುಲ್ ಸಹ ಇನ್ನು ಬಿಡುಗಡೆಯಾಗಿಲ್ಲ. ಅವರ ಪ್ರಚಾರದ ವೇಳಾಪಟ್ಟಿ ಬಂದ ಬಳಿಕ ಕೆಪಿಸಿಸಿ ಅಧ್ಯಕ್ಷರು ಅದನ್ನು ಪ್ರಕಟಿಸುತ್ತಾರೆ ಎಂದು ಅವರು ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಿ ಅಭ್ಯರ್ಥಿ ಘೋಷಣೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ನಮ್ಮಲ್ಲಿ ಸದ್ಯಕ್ಕೆ ಆ ವಿಚಾರದ ಬಗ್ಗೆ ಪ್ರಸ್ತಾಪ ಇಲ್ಲ. ನಮ್ಮ ಇಂಡಿಯಾ ಒಕ್ಕೂಟದ ಎಲ್ಲಾ ಪಕ್ಷಗಳು ಸೇರಿ ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ತೀರ್ಮಾನ ಮಾಡುತ್ತವೆ ಎಂದರು.