ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಶುಕ್ರವಾರ ತನ್ನ ವಶಕ್ಕೆ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಶಾಸಕರನ್ನು ವಿಚಾರಣೆಗಾಗಿ ಅವರ ನಿವಾಸದಿಂದ ಜಾರಿ ನಿರ್ದೇಶನಾಲಯ ಕಚೇರಿಗೆ ಕರೆದೊಯ್ಯಲಾಯಿತು ಎಂದು ಹೇಳಲಾಗಿದೆ. ಹಗರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧದ ಆರೋಪದ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾಗಿದ್ದ ನಾಗೇಂದ್ರ ಜೂನ್ 6ರಂದು ರಾಜಿನಾಮೆ ನೀಡಿದ್ದರು.
ನನ್ನ ಮನೆಯಿಂದ ಕರೆತರಲಾಗುತ್ತಿದೆ. ನನಗೇನೂ ಗೊತ್ತಿಲ್ಲ ಎಂದು ಇಡಿ ಕಚೇರಿಗೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕರ್ನಾಟಕದ ಮಾಜಿ ಸಚಿವ ನಾಗೇಂದ್ರ ಮತ್ತು ಪಾಲಿಕೆಯ ಅಧ್ಯಕ್ಷರಾಗಿರುವ ಆಡಳಿತಾರೂಢ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಅವರ ಮನೆ ಸೇರಿದಂತೆ ಹಲವು ಸ್ಥಳಗಳಲ್ಲಿ ಇಡಿ ಕಳೆದ ಎರಡು ದಿನಗಳಿಂದ ಶೋಧ ನಡೆದಿದೆ.
ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದ ಸುಮಾರು 20 ಸ್ಥಳಗಳನ್ನು ಇಡಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ದಾಖಲಿಸಿದ ಪ್ರಕರಣದ ಭಾಗವಾಗಿ ಒಳಗೊಂಡಿದೆ ಎಂದು ಮೂಲಗಳು ತಿಳಿಸಿವೆ.