ರಾಜ್ಯ ಸರ್ಜಾರದ ರೈತ ವಿರೋಧಿ ನೀತಿಗಳನ್ನು ಹಾಗೂ ಪರಿಶಿಷ್ಟ ವರ್ಗಕ್ಕೆ ಮೀಸಲಿಟ್ಟ 187 ಕೋಟಿ ಹಣದ ದುರುಪಯೋಗವನ್ನು ಖಂಡಿಸಿ, ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆ ರದ್ದು ಮಾಡಲು ಒತ್ತಾಯಿಸಿ ಜುಲೈ 18ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದ್ದಾರೆ.
ಹೆಬ್ಬೂರಿನ ಕೆ.ಎಸ್.ಪುಟ್ಟಣ್ಣಯ್ಯ ರೈತ ಭವನದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷದ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ, ರೈತರಿಗೆ ಮಾರಕವಾಗಿರುವ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಗೋ ಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುವುದಾಗಿ ಹೇಳಿತ್ತು. ಆದರೆ ಈಗ ಮಾತಿಗೆ ತಪ್ಪಿದೆ. ಸರ್ಕಾರದ ನೀತಿಗಳಿಂದಾಗಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಇವುಗಳನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜುಲೈ 18ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ತುಮಕೂರು ಜಿಲ್ಲೆಯೂ ಸೇರಿದಂತೆ ರಾಜ್ಯದಲ್ಲಿ ಅರಣ್ಯ ಇಲಾಖೆ ಮತ್ತು ಬಗರ್ ಹುಕುಂ ಸಾಗುವಳಿದಾರರ ನಡುವಿನ ಸಂಘರ್ಷ ಹೆಚ್ಚಾಗಿದೆ. ಹತ್ತಾರು ವರ್ಷಗಳಿಂದಲೂ ಭೂಮಿ ಉಳುಮೆ ಮಾಡುತ್ತಾ ಬಂದಿದ್ದರೂ ಒಂದಿಲೊಂದು ಕಾರಣ ನೀಡಿ, ಸಾಗುವಳಿ ಚೀಟಿ ನೀಡುತ್ತಿಲ್ಲ. ವಿವಿಧ ಕಾರಣಗಳಿಂದ ರಾಜ್ಯದಲ್ಲಿ ಕಳೆದ ಏಪ್ರಿಲ್‌ನಿಂದ ಇಲ್ಲಿಯವರಗೂ 1182 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಯುವ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆತ್ಮಹತ್ಯೆಗೆ ಶರಣಾಗುತ್ತಿರುವುದು ದೊಡ್ಡ ಆತಂಕ ಸೃಷ್ಟಿಸಿದೆ. ಕೃಷಿ ಉತ್ಪನ್ನಗಳಿಗೆ ಸಮರ್ಪಕ ಬೆಲೆ ಸಿಗದಿರುವುದು ರೈತರ ಆತ್ಮಹತ್ಯೆಗೆ ಕಾರಣವಾಗಿದೆ. ಇದನ್ನು ತಡೆಯಲು ಸರ್ಕಾರ ಕೃಷಿ ಬೆಲೆ ನಿಗಧಿ ಆಯೋಗದ ಶಿಫಾರಸ್ಸುಗಳನ್ನು ಗಂಭೀರವಾಗಿ ಪರಿಗಣಿಸ ಬೇಕು. ಬರಗಾಲದ ನಡುವೆಯೂ ಬ್ಯಾಂಕುಗಳು ಸಾಲ ವಸೂಲಿಗೆ ರೈತರ ಜಮೀನುಗಳನ್ನು ಹರಾಜು ಹಾಕುತ್ತಿರುವುದು ಮುಂದುವರೆದಿದೆ. ಇದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ತುಮಕೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಶಂಕರಪ್ಪ ಮಾತನಾಡಿ, ಪಹಣಿ, ದುರಸ್ತಿ, ಪಕ್ಕಾಪೋಡು, ಹದ್ದುಬಸ್ತು, ನೊಂದಣಿ ಶುಲ್ಕ ಎಲ್ಲವೂ ದುಬಾರಿಯಾಗಿದ್ದು, ಕೂಡಲೇ ವಾಪಸ್ ಪಡೆಯಬೇಕು. ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು. ಹೈನುಗಾರರಿಗೆ ಕಡಿತ ಮಾಡಿರುವ ಹಾಲಿನ ದರವನ್ನು ಮರು ಸ್ಥಾಪಿಸಬೇಕು ಎಂದರು.
ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ತಾಲೂಕು ಅಧ್ಯಕ್ಷರುಗಳಾದ ಚಿಕ್ಕಬೋರೇಗೌಡ, ವೆಂಕಟೇಗೌಡ, ಲೋಕೇಶ್, ಶಬ್ಬೀರ್ ಅಹಮದ್, ಶ್ರೀನಿವಾಸ್, ತಿಮ್ಮೇಗೌಡ, ಮಹಿಳಾ ಅಧ್ಯಕ್ಷೆ ನಾಗರತ್ನಮ್ಮ, ರವೀಶ್ ಮೊದಲಾದವರು ಹಾಜರಿದ್ದರು.