Thursday, November 21, 2024
Google search engine
Homeಮುಖಪುಟರಾಜ್ಯಪಾಲರು ಕೇಂದ್ರದ ಕೈಗೊಂಬೆ:ಸಿದ್ದರಾಮಯ್ಯ ಆರೋಪ

ರಾಜ್ಯಪಾಲರು ಕೇಂದ್ರದ ಕೈಗೊಂಬೆ:ಸಿದ್ದರಾಮಯ್ಯ ಆರೋಪ

ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಶೋಕಾಸ್ ನೋಟೀಸು ಕೊಟ್ಟಿರುವುದು ಕಾನೂನುಬಾಹಿರ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ. ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು.

ಆ.1ರಂದು ನಡೆದ ಸಚಿವ ಸಂಪುಟ ಸಭೆಗೆ ಕೆಟ್ಟ ಸಾಂಪ್ರದಾಯವಾಗುತ್ತದೆ ಎಂದು ನಾನು ಹೋಗದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಭೆ ನಡೆಸಲು ನೇಮಿಸಲಾಗಿತ್ತು. ಶೋಕಾಸ್ ನೋಟಿಸ್ ಬಗ್ಗೆ ಸುದೀರ್ಘ ಚರ್ಚೆ ಮಾಡಿ, ನೋಟೀಸು ನೀಡಿರುವುದು ಕಾನೂನು ಬಾಹಿರವಾಗಿದ್ದು, ನೋಟೀಸನ್ನು ಹಿಂಪಡೆಯಬೇಕೆಂದು ನಿರ್ಧರಿಸಲಾಗಿದೆ ಎಂದರು.

ಕೆ.ಜೆ.ಅಬ್ರಹಾಂ ಅವರ ಇತಿಹಾಸ ನೋಡಿದರೆ ಅವರೊಬ್ಬ ಬ್ಲಾಕ್ ಮೇಲರ್ ಎಂದು ಗೊತ್ತಾಗುತ್ತದೆ. ಆತನ ದೂರಿನ ಮೇಲೆ ಕ್ರಮ ಕೈಗೊಂಡಿರುವುದು ಕಾನೂನು ಬಾಹಿರವಾದ ವಿಚಾರ. ಆತ ಈ ರೀತಿ ಅನೇಕ ಜನರ ಮೇಲೆ ದೂರುಗಳನ್ನು ನೀಡಿದ್ದಾರೆ. ನಾನು ಯಾವುದೇ ಅಪರಾಧವನ್ನು ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.

ಅಬ್ರಹಾಂ ಅವರು ಜುಲೈ 26 ರಂದು 11.30 ಗೆ ದೂರು ನೀಡಿದ್ದು, ಅಂದೇ ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ. ಒಂದೇ ದಿನದಲ್ಲಿ ಕಾನೂನು ವಿಷಯವನ್ನು ಒಳಗೊಂಡ ವಿಚಾರವನ್ನು, 136 ಜನ ಶಾಸಕರ ಬೆಂಬಲದಿಂದ ಆಯ್ಕೆಯಾದ ಮುಖ್ಯಮಂತ್ರಿಗೆ ನೋಟೀಸು ಕೊಡುವಾಗ ಎಲ್ಲಾ ಕಾನೂನನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಏನು ನೋಡದೇ ಆತುರವಾಗಿ ನಿರ್ಧಾರ ಮಾಡಿದ್ದಾರೆ. ಅಂದೇ ನೋಟೀಸು ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರಿಗೆ ವಿಶೇಷ ಕರ್ತವ್ಯಾಧಿಕಾರಿ ಪ್ರಭು ಶಂಕರ್ ಎಂಬುವರು ಕರೆ ಮಾಡಿ ಶೋಕಾಸ್ ನೋಟಿಸ್ ಸಿದ್ಧವಿದೆ ತೆಗೆದುಕೊಳ್ಳಬೇಕು ಎಂದಿದ್ದಾರೆ. ರಾತ್ರಿಯಾಗಿರುವುದರಿಂದ ಅದನ್ನು ಪಡೆಯಲಾಗಲಿಲ್ಲ. ಮಾರನೇ ದಿನ 2.00 ಗಂಟೆಗೆ ನೋಟೀಸನ್ನು ಆತುರವಾಗಿ ಕೊಟ್ಟಿದ್ದಾರೆ ಎಂದು ಹೇಳಿದರು.

ಶಶಿಕಲಾ ಜೊಲ್ಲೆ , ಮುರುಗೇಶ್ ನಿರಾಣಿ, ಜನಾರ್ಧನ್ ರೆಡ್ಡಿಯ ಅರುಗಳ ಮೇಲೆ ವರ್ಷಗಟ್ಟಲೇ ದೂರಿದೆ. ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ? ನನ್ನ ತಪ್ಪು ಏನೂ ಇಲ್ಲದೆ ಅನಗತ್ಯವಾಗಿ ಈ ರೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ರಾಜ್ಯಪಾಲರಿಗೆ ಸಲಹೆ ನೀಡಬೇಕಿರುವುದು ನಮ್ಮ ಮಂತ್ರಿ ಮಂಡಲದವರು. ನಾವು ಸಲಹೆ ನೀಡಿಲ್ಲ. ಮುಖ್ಯ ಕಾರ್ಯದರ್ಶಿಗಳು ವಿವರವಾದ ಪತ್ರವನ್ನು ಜುಲೈ 26 ರಂದು ಸಂಜೆ 6.30 ಗಂಟೆಗೆ ರಾಜ್ಯಪಾಲರಿಗೆ ತಲುಪಿಸಿದ್ದಾರೆ. ಅದನ್ನೂ ಅವರು ನೋಡಿಲ್ಲ. ಮೂಡಾ ಪ್ರಕರಣದ ಬಗ್ಗೆ ನ್ಯಾಯಾಂಗ ಆಯೋಗವನ್ನು ಜುಲೈ 14 ರಂದು ಸರ್ಕಾರ ರಚಿಸಿದೆ. ಆಯೋಗದ ವರದಿಯನ್ನು ನಿರೀಕ್ಷಿಸಲಾಗಿದೆ. ತನಿಖೆ ನಡೆಸಿ ತಪ್ಪುಗಳಾಗಿದ್ದರೆ ವರದಿ ಸಲ್ಲಿಸುತ್ತಾರೆ. ಅದನ್ನೂ ಪರಿಗಣಿಸದೆ ರಾಜ್ಯಪಾಲರು ನೋಟೀಸು ನೀಡಿದ್ದಾರೆ ಎಂದರು.

ರಾಜ್ಯಪಾಲರ ನೋಟೀಸಿನಿಂದ ಆರ್. ಅಶೋಕ್ ಅವರು ಹೆದರಿರಬಹುದು, ನನಗೆ ಯಾಕೆ ಹೆದರಿಕೆಯಾಗಬೇಕು? ಕಾನೂನಿನ ರೀತ್ಯಾ ಅವರು ನೋಟೀಸು ನೀಡಿಲ್ಲ. ತಪ್ಪು ಮಾಡಿದ್ದರೆ ಹೆದರಬೇಕು. ನಾನು ತಪ್ಪು ಮಾಡಿಲ್ಲ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular