Thursday, November 21, 2024
Google search engine
Homeಮುಖಪುಟಪಾದಯಾತ್ರಗೆ ಹೆದರುವುದಿಲ್ಲ - ಸಿಎಂ ಸಿದ್ದರಾಮಯ್ಯ

ಪಾದಯಾತ್ರಗೆ ಹೆದರುವುದಿಲ್ಲ – ಸಿಎಂ ಸಿದ್ದರಾಮಯ್ಯ

ನಾನು ಈ ನೆಲದ ಶೋಷಿತರು, ಶ್ರಮಿಕರು, ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ಇದ್ದೀನಿ. ಇವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ ಎನ್ನುವ ಕಾರಣಕ್ಕೆ ನನ್ನನ್ನು ಕೆಳಗಿಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಈ ನಾಡಿನ‌ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ ಮತ್ತು ಅಧಿಕಾರ ದುರ್ಬಳಕೆ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ, ಜೆಡಿಎಸ್ ನ ಜನತಂತ್ರ ವಿರೋಧಿ ನಡೆಯನ್ನು ವಿರೋಧಿಸಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಜನಾಂದೋಲನ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕದ ಬಿಜೆಪಿ ಜೆಡಿಎಸ್ ಎಷ್ಟೇ ಕಪಟ ಉದ್ದೇಶದ ಪಾದಯಾತ್ರೆ ನಡೆಸಿದರೂ ನಾನು ಹೆದರುವುದಿಲ್ಲ. ರಾಜಭವನ ಮತ್ತು ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ನಡೆಸಿದರೂ ನಾನು ಹೆದರುವುದಿಲ್ಲ. ನಾನು ಇವರ ಷಡ್ಯಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಕೂರುವವನಲ್ಲ. ನೀವೆಲ್ಲಾ ಪ್ರಜಾಪ್ರಭುತ್ವದ ಸೇನಾನಿಗಳು. ಸಂವಿಧಾನ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತ ನಾಡಿನ ಏಳುಕೋಟಿ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ. ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ. ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ. ಈಗ ನನ್ನನ್ನೂ ಸಹಿಸುತ್ತಿಲ್ಲ ಎಂದರು.

ಜೆಡಿಎಸ್ ನ ದೇವೇಗೌಡರು ಮತ್ತು ಎಚ್.ಡಿ.ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಳ್ಳುವವರಲ್ಲ. ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ ನನ್ನ ಶವದ ಮೇಲೆ ನಡೆಸಬೇಕು ಎಂದು ದೇವೇಗೌಡರು ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದ ದೇವೇಗೌಡರೇ ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.

ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ ನನಗೆ ಹಣ ಮಾಡುವ ಆಸೆ ಬಂದಿಲ್ಲ, ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಲ್ಲ. ಎರಡು ಬಾರಿ ಸಿಎಂ ಆದರೂ ಪ್ರಮಾಣ ವಚನಕ್ಕೂ ಬರಲಿಲ್ಲ. ನಾವು ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ. ನಿಮ್ಮ ನಂಬಿಕೆಗೆ ದ್ರೋಹ ಎಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ. ಎಂದರು.

ಬಿಜೆಪಿ, ಜೆಡಿಎಸ್ ಒಟ್ಟಾಗಿ ಎಷ್ಟೇ ಪಾದಯಾತ್ರೆ ನಡೆಸಿದರೂ ನಾನು ಜಗ್ಗಲ್ಲ, ಬಗ್ಗಲ್ಲ. ಹಿಂದುಳಿದ ವರ್ಗಗಳಲ್ಲಿ ದೇವರಾಜ ಅರಸು ಬಿಟ್ಟರೆ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸಿದ್ದು ನಾನು ಮಾತ್ರ. ಇದನ್ನು ಬಿಜೆಪಿ, ಜೆಡಿಎಸ್ ಸಹಿಸುತ್ತಿಲ್ಲ. ಆದರೆ ಎಲ್ಲಿಯವರೆಗೂ ಸೇನಾನಿಗಳಾದ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಯಾವ ಪಾದಯಾತ್ರೆಗಳೂ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ವಾಲ್ಮೀಕಿ ನಿಗಮದ ಪ್ರಕರಣದಲ್ಲೂ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿ ಸೋತರು. ದಾಖಲೆಗಳು ಸ್ಪಷ್ಟವಾಗಿವೆ. ಸರ್ಕಾರಕ್ಕೂ ನಿಗಮದ ಹಗರಣಕ್ಕೂ ಸಂಬಂಧ ಇಲ್ಲ ಎನ್ನುವುದು ದಾಖಲೆಗಳಲ್ಲಿದೆ. ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂದ ತಕ್ಷಣ ನಾವು ವಿಶೇಷ ತನಿಖಾ ದಳ ರಚಿಸಿದೆವು. ತನಿಖೆ ನಡೆದು ಹಣ ವಾಪಾಸ್ ವಸೂಲಾಗಿದೆ. 50 ಕೋಟಿ ರೂಪಾಯಿಯನ್ನು ಎಸ್‌ಐಟಿ ರಿಕವರಿ ಮಾಡಿ ಆಗಿದೆ. 46 ಕೋಟಿ ಹಣ ಖಾಸಗಿ ಬ್ಯಾಂಕ್ ನಲ್ಲಿದ್ದು ಫ್ರೀಜ್ ಮಾಡಿದ್ದಾರೆ. ಇಷ್ಟು ಪರಿಣಾಮಕಾರಿಯಾಗಿ ಎಸ್‌ಐಟಿ ಯವರು ತನಿಖೆ ನಡೆಸಿದ್ದಾರೆ. ಆದರೂ ಇಡಿಯವರು ಸ್ವಯಂಸ್ಫೂರ್ತಿಯಿಂದ ಕೇಸು ದಾಖಲಿಸಿಕೊಂಡು ತನಿಖೆ ನಡೆಸಿದರೂ ಸರ್ಕಾರದ ವಿರುದ್ಧ ಏನೂ ದಾಖಲೆ ಸಿಗಲಿಲ್ಲ. ಹೀಗಾಗಿ ಹಗರಣವೇ ಅಲ್ಲದ ಮೂಡಾ ಪ್ರಕರಣಕ್ಕೆ ಹಗರಣದ ಬಣ್ಣ ಕೊಟ್ಟರು ಎಂದು ಕಿಡಿಕಾರಿದರು.

ನನ್ನದೊಂದು ಪತ್ರ ಇಲ್ಲ, ನನ್ನದೊಂದು ಸಹಿ ಇಲ್ಲ, ಆಗ ನಮ್ಮ ಸರ್ಕಾರ ಅಧಿಕಾರದಲ್ಲೂ ಇರಲಿಲ್ಲ. ಆದರೂ ಹಗರಣ, ಹಗರಣ ಎಂದು ಬೊಬ್ಬೆ ಹಾಕುತ್ತಾ ಸುಳ್ಳು ಆರೋಪ ಹೊರಿಸುತ್ತಿದ್ದಾರೆ. ಇದಕ್ಕೆ ನೀವ್ಯಾರೂ ಸೊಪ್ಪು ಹಾಕಬೇಡಿ, ನಂಬಬೇಡಿ.ಬಿಎಸ್ ಯಡಿಯೂರಪ್ಪ ಅವರು ಈ ವಯಸ್ಸಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಪೋಕ್ಸೋ ಕೇಸಲ್ಲಿ ಇದ್ದಾರೆ. ನಾಚಿಕೆ ಆಗಲ್ವಾ? ಎಂದು ತಿರುಗೇಟು ನೀಡಿದರು.

ಬಿಜೆಪಿ, ಜೆಡಿಎಸ್ ಅಧಿಕಾರಿದಲ್ಲಿ ಇದ್ದಾಗ ನಡೆಸಿದ್ದು ಒಂದಾ, ಎರಡಾ ಹಗರಣಗಳು? ಸುಪ್ರೀಂಕೋರ್ಟ್ ನಲ್ಲಿ ತಮ್ಮ ಹಗರಣಗಳಿಗೆ ತಡೆಯಾಜ್ಞೆ ತಂದಿದ್ದಾರೆ. ಇವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇವರಿಗೆ ನಾಚಿಕೆ ಆಗಲ್ವಾ? ಯಡಿಯೂರಪ್ಪ ಅವರು ಚೆಕ್ ನಲ್ಲಿ ಲಂಚ ಪಡೆದು ಜೈಲಿಗೆ ಹೋದರು. ಆರ್.ಅಶೋಕ್, ವಿಜಯೇಂದ್ರ ಯಡಿಯೂರಪ್ಪ ಇವರೆಲ್ಲರೂ ಜೈಲಿಗೆ ಹೋಗಬೇಕಾದವರು. ಇವರಿಗೆ ನನ್ನ ಬಗ್ಗೆ ಮಾತನಾಡುವ ಯಾವ ಯೋಗ್ಯತೆ ಇದೆ? ಎಂದು ಪ್ರಶ್ನಿಸಿದರು.

ಈಗ ರಾಜಭವನವನ್ನು ದುರುಪಯೋಗಪಡಿಸಿಕೊಂಡು ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ಈ ಷಡ್ಯಂತ್ರದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಯಡಿಯೂರಪ್ಪ, ವಿಜಯೇಂದ್ರ, ಆರ್.ಅಶೋಕ್ ಸೇರಿದ್ದಾರೆ. ಕುಮಾರಸ್ವಾಮಿ ವಿರುದ್ಧ, ನಿರಾಣಿ ವಿರುದ್ಧ, ಶಶಿಕಲಾ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದರೂ ರಾಜಭವನದಿಂದ ಇದುವರೆಗೂ ನೋಟಿಸ್ ಹೋಗಿಲ್ಲ. ಆದರೆ ನನಗೆ ಮಾತ್ರ ನೋಟಿಸ್ ಬಂದಿದೆ. ಇದು ಪರಮ ದ್ರೋಹ ಅಲ್ಲವೇ? ಎಂದು ಕೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular