ತುಮಕೂರು ಜಿಲ್ಲೆಯ ಪ್ರಗತಿ ಸುಧಾರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಚುರುಕುಗೊಳಿಸಲು ಎಲ್ಲಾ ನಿಟ್ಟಿನಲ್ಲಿ ಶ್ರಮಿಸಲಾಗುತ್ತಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದ ಯಾವುದೇ ಬಿಲ್ಲುಗಳು ಬಾಕಿ ಉಳಿಸಿಕೊಳ್ಳದೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗುತ್ತಿದ್ದಂತೆ ಕಾಮಗಾರಿಗಳ ಬಿಲ್ಲಿನ ಮೊತ್ತವನ್ನು ಗುತ್ತಿಗೆದಾರರಿಗೆ ವಿಳಂಬ ಮಾಡದೆ ಸಕಾಲದಲ್ಲಿ ಪಾವತಿ ಮಾಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು ತಿಳಿಸಿದರು.
ತಮ್ಮ ಕಚೇರಿಯಲ್ಲಿ ಮಾತನಾಡಿದ ಅವರು ಕಳಪೆ ಕಾಮಗಾರಿಗಳನ್ನು ಕೈಗೊಂಡಿರುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಈಗಾಗಲೇ ಕ್ರಮವಹಿಸಲಾಗಿದೆ. ಜಲ್ ಜೀವನ್ ಮಿಷನ್ ಯೋಜನೆ ಸಂಬಂಧ ಇತ್ತೀಚೆಗೆ ಗುತ್ತಿಗೆದಾರರ ಸಂಘವು ಅಧಿಕಾರಿಗಳ ಮೇಲೆ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾದುದು. ಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲವೆಂದು ಬಿಲ್ ಪಾವತಿಯನ್ನು ತಿರಸ್ಕರಿಸಿದಾಗ ಇಂತಹ ಆರೋಪಗಳು ಸಾಮಾನ್ಯವೆಂದು ತಿಳಿಸಿದರು. ನೈಜತೆ ಇಲ್ಲದ ಗಾಳಿ ಸುದ್ದಿಗಳಿಗೆ ನಾನು ತಲೆ ಕೆಡಿಸುವುದಿಲ್ಲ. ನಾನು ಅಧಿಕಾರ ವಹಿಸಿಕೊಂಡ ನಂತರ ಅಶಿಸ್ತು, ಕರ್ತವ್ಯ ನಿರ್ಲಕ್ಷ್ಯತೆ ತೋರಿದ ಸುಮಾರು 20 ಪಿಡಿಓಗಳನ್ನು ಯಾವುದೇ ಮುಲಾಜಿಲ್ಲದೆ ಅಮಾನತ್ತು ಮಾಡಿದ್ದೇನೆ ಎಂದು ಸ್ಪಷ್ಟನೆ ನೀಡಿದರು.
ಜಿಲ್ಲೆಯಲ್ಲಿ ಪ್ರತೀ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಟಾನಿಸುವಾಗ ಗುಣಮಟ್ಟದ ಪರೀಕ್ಷೆಯನ್ನು 3ನೇ ವ್ಯಕ್ತಿಯಿಂದ ತಪಾಸಣೆ ಮಾಡಿಸಲಾಗುತ್ತಿದೆ ಎಂದು ತಿಳಿಸಿದರು. ಜಲ್ ಜೀವನ್ ಮಿಷನ್ ಕಾಮಗಾರಿಗಳ ಬಿಲ್ ಪಾವತಿ ವಿಳಂಬಕ್ಕೆ ಸಂಬಂಧಿಸಿದಂತೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಲೋಕಸಭಾ ಚುನಾವಣಾ ಮಾದರಿ ನೀತಿ ಸಂಹಿತೆ, ಆರ್ಥಿಕ ವರ್ಷ ಮುಕ್ತಾಯ ಅವಧಿಯಲ್ಲಿ ಬಿಲ್ ಪಾವತಿ ಮಾಡಲು ವಿಳಂಬವಾಗಿದೆ. ಕಾಮಗಾರಿ ಪೂರ್ಣಗೊಂಡ ಒಂದು ತಿಂಗಳ ಅವಧಿಯೊಳಗೆ ಗುತ್ತಿಗೆದಾರರಿಗೆ ಬಿಲ್ ಪಾವತಿಸಲಾಗುತ್ತಿದೆ ಎಂದು ತಿಳಿಸಿದರು.
ಜಲ್ ಜೀವನ್ ಮಿಷನ್ ಕಾಮಗಾರಿಗಾಗಿ 2021 ರಿಂದ 100 ಕೋಟಿ ರೂ.ಗಳ ಜಿಎಸ್‌ಟಿ ಮೊತ್ತ ಸೇರಿ ಈವರೆಗೆ ಒಟ್ಟು 446 ಕೋಟಿ ರೂ.ಗಳನ್ನು ಪಾವತಿ ಮಾಡಲಾಗಿದೆ. ಗ್ರಾಮೀಣ ಪ್ರದೇಶಗಳ ಜನರಿಗಾಗಿ ಶಾಶ್ವತ ಕಾಮಗಾರಿಗಳನ್ನು ಸೃಜಿಸಲು ಹಾಗೂ ಸರ್ಕಾರದ ಅನುದಾನವನ್ನು ಸದ್ಬಳಕೆ ಮಾಡಲು ಎಲ್ಲಾ ಗ್ರಾಮ ಪಂಚಾಯತಿ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.