Friday, October 18, 2024
Google search engine
Homeಮುಖಪುಟತನಿಖೆಗೆ ಆದೇಶ ನೀಡಿದ ಮಾತ್ರಕ್ಕೆ ನಾನು ತಪ್ಪು ಮಾಡಿದ್ದೇನೆ ಎಂದಲ್ಲ-ಸಿದ್ದರಾಮಯ್ಯ

ತನಿಖೆಗೆ ಆದೇಶ ನೀಡಿದ ಮಾತ್ರಕ್ಕೆ ನಾನು ತಪ್ಪು ಮಾಡಿದ್ದೇನೆ ಎಂದಲ್ಲ-ಸಿದ್ದರಾಮಯ್ಯ

ನಮ್ಮ ಸರ್ಕಾರವನ್ನು ಅಭದ್ರಗೊಳಿಸಲು ಹಾಗೂ ನನ್ನ ರಾಜಕೀಯ ಜೀವನಕ್ಕೆ ಮಸಿ ಬಳಿಯಲು ಕರ್ನಾಟಕದ ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಭವಿಷ್ಯದಲ್ಲಿ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮುಡಾ ಪ್ರಕರಣ ಸಂಬಂಧ ಉಚ್ಛ ನ್ಯಾಯಾಲಯವು ನೀಡಿರುವ ಆದೇಶದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,

ಬಿಜೆಪಿ – ಜೆಡಿಎಸ್ ನಾಯಕರ ಸಂಚು, ರಾಜಭವನ ದುರುಪಯೋಗ – ದುರ್ಬಳಕೆಗೆ ನಾನು ಹೆದರುವುದಿಲ್ಲ. ರಾಜ್ಯದ ಜನ, ಪಕ್ಷದ ಹೈಕಮಾಂಡ್, ಶಾಸಕರು, ಸಚಿವರು, ಕಾರ್ಯಕರ್ತರು ನನ್ನೊಂದಿಗಿದ್ದಾರೆ. ಕಾನೂನು ಹೋರಾಟಕ್ಕೆ ಹೈಕಮಾಂಡ್ ಸಹಕಾರ ನೀಡಲಿದೆ. ನರೆಂದ್ರ ಮೋದಿಯವರ ಬಿಜೆಪಿ ಸರ್ಕಾರ ಕೇವಲ ನನ್ನ ಮೇಲಷ್ಟೇ ಅಲ್ಲ, ಇಡೀ ದೇಶದ ವಿರೋಧಪಕ್ಷಗಳ ಮೇಲೆ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ದೂರಿದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ ಕಾಯ್ದೆ 19ರಂತೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವುದನ್ನು ತಿರಸ್ಕರಿಸಿ, ಪಿಸಿ ಕಾಯ್ದೆಯ 17ಎ ಪ್ರಕಾರ ತನಿಖೆಗೆ ಉಚ್ಛನ್ಯಾಯಾಲಯ ಆದೇಶ ನೀಡಿದೆ. ಈ ತೀರ್ಪಿನ ಮೇಲೆ ಮುಂದಿನ ಕಾನೂನು ಹೋರಾಟದ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡಿ, ತೀರ್ಮಾನ ಮಾಡಲಾಗುವುದು ಎಂದರು.

ನಾನು ತಪ್ಪು ಮಾಡಿಲ್ಲ. 17ಎ ರಡಿ ತನಿಖೆ ಮಾಡಲು ಆದೇಶ ನೀಡಿದ ಮಾತ್ರಕ್ಕೆ ನಾನು ತಪ್ಪು ಮಾಡಿದ್ದೇನೆ ಎಂದಲ್ಲ. ಇಡೀ ದೇಶದಲ್ಲಿ ವಿಪಕ್ಷಗಳ ಸರ್ಕಾರದ ಮೇಲೆ ನರೇಂದ್ರ ಮೋದಿ ಸರ್ಕಾರ ಪಿತೂರಿ ಮಾಡಿದಂತೆ ಕರ್ನಾಟಕದಲ್ಲಿಯೂ ನನ್ನ ಹಾಗೂ ನಮ್ಮ ಸರ್ಕಾರದ ವಿರುದ್ಧ ಪಿತೂರಿ ಮಾಡಲಾಗಿದೆ ಎಂದು ದೂರಿದರು.

ಮುಂದಿನ ದಿನಗಳಲ್ಲಿ ಖಂಡಿತಾ ನನಗೆ ಜಯ ಸಿಗಲಿದೆ. ಬಿಜೆಪಿಯವರನ್ನು ನಾವು ರಾಜಕೀಯವಾಗಿ ಎದುರಿಸುತ್ತೇವೆ. ಅವರು ಹೇಳಿದ ಮಾತ್ರಕ್ಕೆ ನಾನು ರಾಜೀನಾಮೆ ಏಕೆ ಕೊಡಬೇಕು? ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಮೇಲೆ ಎಫ್.ಐ.ಆರ್ ಆಗಿದ್ದು, ಅವರು ಜಾಮೀನಿನ ಮೇಲೆ ಇದ್ದಾರೆ. ಅವರು ರಾಜೀನಾಮೆ ಕೊಟ್ಟಿದ್ದಾರೆಯೇ? ಇದು ಅವರಿಗೆ ಅನ್ವಯವಾಗುವುದಿಲ್ಲವೇ? ತನಿಖೆ ಹಂತದಲ್ಲಿಯೇ ರಾಜೀನಾಮೆ ಕೊಡಬೇಕು ಎನ್ನುವ ಬಿಜೆಪಿ ವಾದಕ್ಕೆ ಕುಮಾರಸ್ವಾಮಿ ಅವರ ಪ್ರತಿಕ್ರಿಯೆ ಏನೆಂದು ಕೇಳಿ ಎಂದರು.

ಬಿಜೆಪಿ ಹಾಗೂ ಜಾತ್ಯತೀತ ಜನತಾ ದಳದವರು ಒಮ್ಮೆಯೂ ರಾಜ್ಯದಲ್ಲಿ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬಂದಿಲ್ಲ. ವಿಧಾನಸಭೆ ಚುನಾವಣೆಯಲ್ಲಿಯೂ ಸೋತಿದ್ದಾರೆ. ಅವರು ಈ ಹಿಂದೆ ಹಣಬಲದಿಂದ, ಆಪರೇಷನ್ ಕಮಲ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರೇ ಹೊರತು, ಜನರ ಆಶೀರ್ವಾದದೊಂದಿಗೆ ಎಂದಿಗೂ ಬಂದಿಲ್ಲ ಎಂದು ಆರೋಪಿಸಿದರು.

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನ ಗೆದ್ದಿದ್ದೇವೆ ಹಾಗಾಗಿ ಆಪರೇಷನ್ ಕಮಲ ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ದುಡ್ಡನ್ನು ಕೊಟ್ಟು ಶಾಸಕರನ್ನು ಖರೀದಿಸುವ ಪ್ರಯತ್ನ ಮಾಡಿದ್ದರು, ಆದರೆ ನಮ್ಮ ಯಾವ ಶಾಸಕರೂ ದುಡ್ಡಿನ ಹಿಂದೆ ಹೋಗದ ಕಾರಣ ಅವರ ಪ್ರಯತ್ನ ವಿಫಲವಾಯಿತು ಎಂದರು.

ನಮ್ಮ ಸರ್ಕಾರದ ಬಡವರ ಪರ ಕಾರ್ಯಕ್ರಮಗಳನ್ನು ಬಿಜೆಪಿ ನಾಯಕರು ವಿರೋಧಿಸುತ್ತಾ ಬಂದಿದ್ದಾರೆ. ಶೂಭಾಗ್ಯ, ಪಶುಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಹಲವು ಜನಪರ ಯೋಜನೆಗಳು ಹಾಗೂ ಈಗಿನ ಗ್ಯಾರಂಟಿ ಯೋಜನೆಗಳನ್ನು ಸಹ ವಿರೋಧಿಸುತ್ತಿದ್ದಾರೆ. ಬಿಜೆಪಿಯವರು ಸಾಮಾಜಿಕ ನ್ಯಾಯ, ಬಡವರ ವಿರೋಧಿಗಳು. ಸರ್ಕಾರಕ್ಕೆ ಕಪ್ಪು ಮಸಿ ಬಳಿಯುವುದು ಅವರ ದುರಾಲೋಚನೆ. ಹೈಕೋರ್ಟ್ ಆದೇಶದ ಪ್ರತಿಯನ್ನು ಸಂಪೂರ್ಣ ಪರಿಶೀಲಿಸಿ, ಮುಂದಿನ ಪ್ರತಿಕ್ರಿಯೆ ನೀಡುತ್ತೇನೆ ಎಂದು ಮಾಧ್ಯಮಗಳ ಮುಂದೆ ವಿವರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular