Friday, October 18, 2024
Google search engine
Homeಮುಖಪುಟತೀವ್ರ ಕುತೂಹಲ ಮೂಡಿಸಿದ ಪರಮೇಶ್ವರ್-ಸತೀಶ್ ಜಾರಕಿಹೊಳಿ ಭೇಟಿ

ತೀವ್ರ ಕುತೂಹಲ ಮೂಡಿಸಿದ ಪರಮೇಶ್ವರ್-ಸತೀಶ್ ಜಾರಕಿಹೊಳಿ ಭೇಟಿ

ತುಮಕೂರಿನ ಸಿದ್ದಾರ್ಥ ಇಂಜಿನಿಯರ್ ಕಾಲೇಜಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕೀಹೊಳಿ ಅವರು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಈ ಇಬ್ಬರು ಸಚಿವರ ಭೇಟಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗಷ್ಟೇ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದ ಸಚಿವ ಸತೀಶ್ ಜಾರಕಿಹೊಳಿ ನಂತರ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿದ್ದರು. ಇದೀಗ ಎರಡನೇ ಬಾರಿ ಪರಮೇಶ್ವರ್ ಅವರನ್ನು ಭೇಟಿ ಮಾಡಿರುವುದು ಚರ್ಚೆಗೆ ಗ್ರಾಸ ಒದಗಿಸಿದೆ.

ತುಮಕೂರಿನಲ್ಲಿ ನಡೆದ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ವತಿಯಿಂದ ಹಮ್ಮಿಕೊಂಡಿದ್ದ ರಾಜ್ಯ ಸರ್ವ ಸದಸ್ಯರ ಮಹಾ ಅಧಿವೇಶನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳುವ ಮುನ್ನ ಪರಮೇಶ್ವರ್ ಒಡೆತನದ ಸಿದ್ದಾರ್ಥ ಇಂಜಿನಿಯರ್ ಕಾಲೇಜಿನಲ್ಲಿ ಇಬ್ಬರು ನಾಯಕರು ಭೇಟಿ ಮಾಡಿ ಪಕ್ಷದಲ್ಲಾಗುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಕಳೆದ ಎರಡು ತಿಂಗಳ ಅವಧಿಯಲ್ಲಿ ಸತೀಶ್ ಜಾರಕಿಹೊಳಿಯವರು ಪರಮೇಶ್ವರ್ ಅವರನ್ನು ಹಲವು ಬಾರಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್ ನಲ್ಲಾಗುತ್ತಿರುವ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಇಬ್ಬರು ಸಚಿವದ್ವಯರ ಭೇಟಿಗೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ಮುಖ್ಯಮಂತ್ರಿ ಬದಲಾವಣೆಯ ಕುರಿತು ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪದೇ ಪದೇ ಈ ನಾಯಕರು ಭೇಟಿ ಮಾಡುತ್ತಿರುವುದು ಚರ್ಚೆಯನ್ನು ಹುಟ್ಟುಹಾಕಿದೆ.

ಇದರ ನಡುವೆಯೇ ಬೆಳಗಾವಿಯಲ್ಲಿ ನಡೆದ ಸತೀಶ್ ಜಾರಕಿಹೊಳಿಯವರ ಪುತ್ರಿ ಪ್ರಿಯಾಂಕ ಅವರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ನಾಯಕ ಸಮುದಾಯದ ಮುಖಂಡರು ಸತೀಶ್ ಜಾರಕಿಹೊಳಿ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗುತ್ತಾರೆ ಎಂದು ಘೋಷಣೆ ಮಾಡಿದ್ದಾರೆ.

ಕಳೆದ 15 ದಿನಗಳಿಂದ ಸಚಿವ ಸತೀಶ್ ಜಾರಕಿಹೊಳಿ ಅವರು ಅತ್ಯಂತ ಕ್ರಿಯಾಶೀಲವಾಗಿ ಓಡಾಟ ನಡೆಸಿದ್ದಾರೆ. ದೆಹಲಿಗೆ ಭೇಟಿ ನೀಡಿರುವುದು ಮತ್ತು ಬೆಂಗಳೂರು ಮತ್ತು ತುಮಕೂರಿನಲ್ಲಿ ಪರಮೇಶ್ವರ್ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸ ಒದಗಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular