ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅಪಾಯಕಾರಿಯಾಗಿದ್ದು ಆದಷ್ಟು ಬೇಗ ಅವರು ಅಧಿಕಾರದಿಂದ ತೊಲಗಿದರೆ ಜನರಿಗೆ ಮತ್ತು ದೇಶಕ್ಕೆ ಒಳ್ಳೆಯದಾಗಲಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜಿವಾಲಾ ತಿಳಿಸಿದರು.
ರಾಯಚೂರಿನಲ್ಲಿ ನಡೆದ ಕಲ್ಬುರ್ಗಿ ವಿಭಾಗೀಯ ಮಟ್ಟದ ವಿವಿಧ ಜಿಲ್ಲೆಗಳ ಕಾಂಗ್ರೆಸ್ ಮುಖಂಡರ ಜೊತೆ ಪಕ್ಷದ ಸಂಘಟನೆ, ಬಲವರ್ಧನೆ ಕುರಿತ ಸಮಾಲೋಚನೆ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರ ನೀಡಿ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತೀವ್ರ ಗತಿಯಲ್ಲಿ ಏರಿಕೆಯಾಗಿದೆ. ಅಬಕಾರಿ ಶುಲ್ಕ ದುಪ್ಪಟ್ಟು ಮಾಡಿದೆ. ಪೆಟ್ರೊಲ್ ಮೇಲೆ ರೂ.23.87 ಹೆಚ್ಚುವರಿ ಅಬಕಾರಿ ಶುಲ್ಕ ಹಾಕಿದ್ದರೆ, ಡೀಸೆಲ್ ಮೇಲೆ ರೂ. 28.37 ಹೆಚ್ಚುವರಿ ಅಬಕಾರಿ ಶುಲ್ಕ ವಿಧಿಸಲಾಗಿದೆ. ಜನರಿಂದ ಸುಲಿಗೆ ಮಾಡಲಾಗುತ್ತಿದೆ ಎಂದು ಟೀಕಿಸಿದರು.
ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಪೆಟ್ರೊಲ್ ಮತ್ತು ಡೀಸೆಲ್ ಮೇಲೆ ಹೆಚ್ಚುವರಿ ಎಕ್ಸೈಜ್ ಶುಲ್ಕದಿಂದ 17,280 ಲಕ್ಷ ಕೋಟಿ ರೂಪಾಯಿ ಸಂಗ್ರಹಿಸಿದೆ. ಅಬಕಾರಿ ಸುಂಕ ವಿಧಿಸಿರುವುದರಿಂದ 22,33,868 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಜನರಿಂದ ವಸೂಲಿ ಮಾಡಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬ್ಯಾರೆಲ್ ತೈಲ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿ ಜನರಿಂದ ಸುಲಿಗೆ ಮಾಡುತ್ತಿದೆ ಎಂದು ಆರೋಪಿಸಿದರು
ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಎಐಸಿಸಿ ವೀಕ್ಷಕ ಮಧು ಯಾಕ್ಷಿಗೌಡ, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಸತೀಶ್ ಜಾರಕಿಹೊಳಿ, ಮಾಜಿ ಸಚಿವರಾದ ಎಚ್.ಕೆ. ಪಾಟೀಲ್, ಅಲ್ಲಂ ವೀರಭದ್ರಪ್ಪ, ಮಾಜಿ ಶಾಸಕ ಭೋಸರಾಜ್ ಮೊದಲಾದವರು ಇದ್ದರು.
11