Thursday, November 21, 2024
Google search engine
Homeಜಿಲ್ಲೆಅ.26, 27ರಂದು ಸ್ಪರ್ಧಾತ್ಮಕ ಪರೀಕ್ಷೆ-ನೀರು ತೆಗೆದುಕೊಂಡೂ ಬರಬೇಡಿ-ಡಿಸಿ ಶುಭಕಲ್ಯಾಣ್

ಅ.26, 27ರಂದು ಸ್ಪರ್ಧಾತ್ಮಕ ಪರೀಕ್ಷೆ-ನೀರು ತೆಗೆದುಕೊಂಡೂ ಬರಬೇಡಿ-ಡಿಸಿ ಶುಭಕಲ್ಯಾಣ್

ತುಮಕೂರಿನ 6 ಪರೀಕ್ಷಾ ಕೇಂದ್ರಗಳಲ್ಲಿ ಅಕ್ಟೋಬರ್ 26ರಂದು ನಡೆಯುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗೆ 2672 ಹಾಗೂ ಅ.27ರಂದು ಜಿಲ್ಲಾದ್ಯಂತ 52 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಗ್ರಾಮ ಆಡಳಿತ ಅಧಿಕಾರಿ ಪ್ರವೇಶ ಪರೀಕ್ಷೆಗೆ 22544 ಸೇರಿ ಒಟ್ಟು 25,216 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಅನುವಾಗುವಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಡಿಸಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾರ್ಥಿಗಳಿಗೆ ಯಾವುದೇ ರೀತಿಯ ಅಡೆತಡೆ ಉಂಟಾಗದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಗೌಪ್ಯ ಸಾಮಗ್ರಿಗಳನ್ನು ವಿತರಿಸಲು ತಹಶೀಲ್ದಾರ್‌ಗಳ ನೇತೃತ್ವದಲ್ಲಿ ತ್ರಿ-ಸದಸ್ಯ ಸಮಿತಿಯನ್ನು ನೇಮಕ ಮಾಡಲಾಗಿದ್ದು, ನಿಯೋಜಿತರು ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕೆಂದು ನಿರ್ದೇಶನ ನೀಡಿದರು.

ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬ ಅಭ್ಯರ್ಥಿಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾರ್ಥಿಗಳು ಅರ್ಧ ತೋಳಿನ ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಅಂಗಿ, ಕಡಿಮೆ ಸಂಖ್ಯೆಯ ಜೇಬುಗಳಿರುವ ಪ್ಯಾಂಟ್ ಧರಿಸಬೇಕು. ಕುರ್ತಾ, ಪೈಜಾಮ, ಜೀನ್ಸ್ ಪ್ಯಾಂಟ್ ಧರಿಸುವಂತಿಲ್ಲ. ಪರೀಕ್ಷಾ ಕೊಠಡಿಯೊಳಗೆ ಶೂ, ಕಿವಿಯೋಲೆ, ಉಂಗುರ, ಕಡಗ ಸೇರಿದಂತೆ ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವಂತಿಲ್ಲ. ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್ ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವಂತಿಲ್ಲ. ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಇತರೆ ಲೋಹದ ಆಭರಣಗಳನ್ನೂ ಧರಿಸುವಂತಿಲ್ಲ ಎಂದು ತಿಳಿಸಿದರು.

ಎಲೆಕ್ಟ್ರಾನಿಕ್ ವಸ್ತು, ಮೊಬೈಲ್ ಫೋನ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್, ಬ್ಲೂ ಟೂತ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವಂತಿಲ್ಲ. ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸುವುದರಿಂದ ಕುಡಿಯುವ ನೀರಿನ ಬಾಟಲಿಗೂ ಸಹ ಅನುಮತಿ ಇರುವುದಿಲ್ಲ ಎಂದು ತಿಳಿಸಿದರು.

ಸಭೆಯಲ್ಲಿ ಎಡಿಸಿ ಡಾ. ಎನ್. ತಿಪ್ಪೇಸ್ವಾಮಿ, ಡಿವೈಎಸ್‌ಪಿ ಮರಿಯಪ್ಪ, ವಿವಿಧ ತಹಶೀಲ್ದಾರ್‌ಗಳು, ಜಿಲ್ಲಾ ಖಜಾನೆ ಉಪನಿರ್ದೇಶಕ ಉಮಾ, ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ತ್ರಿಸದಸ್ಯ ಸಮಿತಿ ಸದಸ್ಯರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಮತ್ತಿತರ ಜಿಲ್ಲಾ/ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular