ಹಿಂದಿ ಭಾಷೆಗೆ ದೊರೆಯುತ್ತಿರುವ ವಿಶೇಷ ಪ್ರಾಶಸ್ತ್ಯ ಇತರೆ ಭಾಷೆಗಳಿಗೆ ಸಿಗದಿರುವುದು ವಿಪರ್ಯಾಸ. ಹಿಂದಿ ಭಾಷೆ ರಾಷ್ಟ್ರ ಭಾಷೆಯಲ್ಲ. ಹಿಂದಿಯಂತೆ ಕನ್ನಡಕ್ಕೂ ಪ್ರಾಶಸ್ತ್ಯ ದೊರೆಯಬೇಕು ಎಂದು ನಾಡೋಜ ಸಾಹಿತಿ ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.
ತುಮಕೂರು ನಗರದ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕನ್ನಡಕ್ಕಷ್ಟೆ ಅಲ್ಲದೆ, ದೇಶದ ಇತರೆ ರಾಜ್ಯಗಳ ಭಾಷೆಗಳಿಗೂ ಪ್ರಾಶಸ್ತ್ಯ ದೊರೆಯಬೇಕೆಂದು ನಮ್ಮ ಆಗ್ರಹವಿದೆ. ರಾಷ್ಟ್ರದ ಎಲ್ಲಾ ರಾಜ್ಯಗಳ ಭಾಷೆಗಳು ಸಮಾನವೆನ್ನಲು ರಾಷ್ಟ್ರೀಯ ಭಾಷಾ ನೀತಿ ರಚನೆಯಾಗಬೇಕೆಂಬ ಹೋರಾಟ ನಮ್ಮದು ಎಂದು ತಿಳಿಸಿದರು.
ಕನ್ನಡಕ್ಕೆ 2008ರ ನವೆಂಬರ್ 1ರಂದು ಶಾಸ್ತ್ರೀಯ ಸ್ಥಾನಮಾನ ನೀಡಿದ್ದರೂ ಸಹ ಶಾಸ್ತ್ರೀಯ ಭಾಷೆಗೆ ಸಂಬಂಧಿಸಿದ ಪ್ರತ್ಯೇಕ ಸಂಸ್ಥೆಯನ್ನು ಸ್ಥಾಪಿಸಲು ಕರ್ನಾಟಕಕ್ಕೆ ಈವರೆಗೂ ಸಾಧ್ಯವಾಗಿಲ್ಲ. ಸರ್ಕಾರ ಈ ನಿಟ್ಟಿನಲ್ಲಿ ಗಮನಹರಿಸಬೇಕು. ತಮಿಳುನಾಡಿನಲ್ಲಿ ಇಂತಹದೊಂದು ಪ್ರತ್ಯೇಕ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಕೇಂದ್ರದ ಮಾನವ ಸಂಪನ್ಮೂಲ ಇಲಾಖೆಯಿಂದ ಅನುಮತಿ ಪಡೆದು ಕನ್ನಡದ ಪ್ರತ್ಯೇಕ ಶಾಸ್ತ್ರೀಯ ಭಾಷಾ ಸಂಸ್ಥೆ ಸ್ಥಾಪನೆಗೆ ಮುಂದಾಗಬೇಕೆಂದು ಗೃಹ ಸಚಿವರಲ್ಲಿ ಅವರು ಮನವಿ ಮಾಡಿದರು. ಪ್ರತ್ಯೇಕ ಶಾಸ್ತ್ರೀಯ ಭಾಷಾ ಸಂಸ್ಥೆ ಸ್ಥಾಪನೆಯಿಂದ ರಾಜ್ಯ ಭಾಷೆಗಳು ಮತ್ತಷ್ಟು ಬಲಗೊಳ್ಳಲು ಸಾಧ್ಯವೆಂದು ತಿಳಿಸಿದರು.
ಕನ್ನಡ ನಾಡು-ನುಡಿಗಾಗಿ ಶ್ರಮಿಸಿದ ಹೆಸರಾಂತ ಸಾಹಿತಿಗಳ ವಸ್ತು ಸಂಗ್ರಹಾಲಯ ಹಾಗೂ ಕಲಾಮಂದಿರದ ನಿರ್ಮಾಣ ಮಾಡುವ ಚಿಂತನೆಯಿದ್ದು, ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದರು.
ಸಾಹಿತಿಗಳು, ವಿಚಾರವಾದಿಗಳು, ಚಿಂತಕರು, ವಿಮರ್ಶಕರು, ವಿಶ್ಲೇಷಕರು ಒಂದೆಡೆ ಸೇರಿ ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕು. ಸಾಹಿತ್ಯ ಕ್ಷೇತ್ರ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಚಿಂತನೆ, ಚರ್ಚೆ, ವಿಮರ್ಶೆ, ಟೀಕೆ-ಟಿಪ್ಪಣಿಗಳು ನಡೆಯಬೇಕು. ಶಿಕ್ಷಣ ಕ್ಷೇತ್ರದಲ್ಲಿರುವ ಸಮಸ್ಯೆಗಳ ಬಗ್ಗೆ ಸುದೀರ್ಘ ಚರ್ಚೆಗಳಾಗಬೇಕು ಎಂದು ತಿಳಿಸಿದರು.
ಸಂಶೋಧಕ ಡಾ. ಡಿ.ಎನ್. ಯೋಗೀಶ್ವರಪ್ಪ, ಚಿಂತಕ ಕೆ.ಪಿ.ನಟರಾಜು, ಹಿರಿಯ ಪತ್ರಕರ್ತ ಚ.ಹ.ರಘುನಾಥ್, ಲೇಖಕಿ ಬಾ.ಹ.ರಮಾಕುಮಾರಿ ಡಾ. ರಾಜಪ್ಪ ದಳವಾಯಿ ವಿಷಯ ಮಂಡಿಸಿದರು.