ಕ್ರೀಡೆ ನಮ್ಮಲ್ಲಿರುವ ಸ್ಪರ್ಧಾತ್ಮಕ ಗುಣವನ್ನು ಹೆಚ್ಚಿಸುತ್ತದೆ. ಕ್ರೀಡೆಯಿಂದ ಉತ್ತಮ ದೈಹಿಕ ಮತ್ತು ಮಾನಸಿಕ ಸದೃಢತೆ ಸಾಧ್ಯವಾಗುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರಪಾಲಿಕೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡೆ ಮನುಷ್ಯನ ಆರೋಗ್ಯಕ್ಕೆ ಉತ್ತಮ ಸಾಧನ. ಹಾಗಾಗಿ ಸದಾ ಒತ್ತಡದ ಕಾರ್ಯನಿರ್ವಹಿಸುವ ಪತ್ರಕರ್ತರು ದೈಹಿಕ ಮತ್ತು ಮಾನಸಿಕ ನೆಮ್ಮದಿಗಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅವಶ್ಯಕ ಎಂದರು.
ಲೇಖನಿ ಮೂಲಕ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಕೆಲಸ ಮಾಡುತ್ತಿರುವ ಪತ್ರಕರ್ತರು ಉತ್ತಮ ಬರವಣಿಗೆ ಮುಖೇನ ಸಮಾಜದ ಮೇಲೆ ಪರಿಣಾಮ ಬೀರುವ ಅವಲೋಕನದಲ್ಲಿರಬೇಕು ಎಂದು ಸಲಹೆ ಮಾಡಿದರು.
ತುಮಕೂರಿನಲ್ಲಿ 58 ಕೋಟಿ ರೂ.ಖರ್ಚು ಮಾಡಿ ಸುಸಜ್ಜಿತವಾಗಿ ಕ್ರೀಡಾಂಗಣ ನಿರ್ಮಿಸಲಾಗಿದೆ. ಅಥ್ಲೆಟಿಕ್, ಕಬ್ಬಡ್ಡಿ, ಖೋಖೋ ಸೇರಿದಂತೆ ಮುಂತಾದ ಕ್ರೀಡೆಗಳನ್ನು ಜಿಲ್ಲೆಯ ಕ್ರೀಡಾಪಟುಗಳು ಪ್ರತಿನಿಧಿಸುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಕ್ರೀಡೆಗೆ ಪ್ರೋತ್ಸಾಹ ಕಡಿಮೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ಕ್ರೀಡೆಗಳನ್ನು ಪ್ರೋತ್ಸಾಹಿಸುವ ಕೆಲಸ ಆಗಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಜ್ಯೋತಿಗಣೇಶ್, ಚಿದಾನಂದ ಗೌಡ, ಡಿಸಿ ಶುಭಕಲ್ಯಾಣ್, ಜಿ.ಪಂ. ಸಿಇಒ ಜಿ. ಪ್ರಭು, ಎಸ್.ಪಿ ಅಶೋಕ್ ಕೆ.ವಿ., ತುಮಕೂರು ವಿವಿ ಕುಲಪತಿ ಪ್ರೊ. ವೆಂಕಟೇಶ್ವರಲು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ, ಎಡಿಸಿ ಡಾ. ತಿಪ್ಪೇಸ್ವಾಮಿ, ಐಎಫ್‌ಡಬ್ಲ್ಯೂಜೆ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ್, ಜಿಲ್ಲಾ ಘಟಕದ ಅಧ್ಯಕ್ಷ ಚಿ.ನಿ. ಪುರುಷೋತ್ತಮ್, ಪ್ರಧಾನ ಕಾರ್ಯದರ್ಶಿ ಟಿ.ಇ. ರಘುರಾಮ್, ಪ್ರಚಾರ ಸಮಿತಿಯ ರಂಗರಾಜು ಇದ್ದರು.


