ತುಮಕೂರಿನಲ್ಲಿ ಡಿ.2ರಂದು ನಡೆಯಲಿರುವ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಕಪ್ಪುಬಾವುಟ ಪ್ರದರ್ಶಿಸುವ ವ್ಯಕ್ತಿಗಳಿಗೆ ತಲಾ 1ಲಕ್ಷ ರೂ ಬಹುಮಾನ ನೀಡುವುದಾಗಿ ಘೋಷಿಸುವ ಮೂಲಕ ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ಕಾರ್ಯಕ್ರಮದಲ್ಲಿ ದೊಂಬಿ ಎಬ್ಬಿಸಲು ಹುನ್ನಾರ ನಡೆಸಿದ್ದಾರೆ ಎಂದು ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಆರೋಪಿಸಿದರು.
ತುಮಕೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರೇಶಗೌಡ ಅವರು ತಮ್ಮ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿ, ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿದರೆ 1 ಲಕ್ಷ ರೂ, ಸಿ.ಎಂ.ವಿರುದ್ದ ಘೋಷಣೆ ಕೂಗಿದರೆ 50 ಸಾವಿರ ರೂ ಹಣ ನೀಡುವುದಾಗಿ ಘೋಷಣೆ ಮಾಡಿದ್ದು, ರೌಡಿಗಳು, ಗೂಂಡಾಗಳನ್ನು ಬಿಟ್ಟು ಕಾರ್ಯಕ್ರಮವನ್ನು ಹಾಳುಗೆಡವಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದರು.
ಗ್ರಾಮಾಂತರ ಶಾಸಕರು ಮುಖ್ಯಮಂತ್ರಿಗಳಿಗೆ ಕಪ್ಪು ಬಾವುಟ ಪ್ರದರ್ಶಿಸಲು ಹಣದ ಅಮಿಷಕ್ಕೆ ಒಡ್ಡಿದ್ದಾರೆ. ಆದರೆ ಕ್ಷೇತ್ರದ ಜನರು ಯಾವುದೇ ಅಮೀಷಕ್ಕೆ ಒಳಗಾಗದೆ ಶಾಸಕ ಸುರೇಶಗೌಡರಿಗೆ ಕಪ್ಪು ಬಾವುಟ ಪ್ರದರ್ಶಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಚುನಾವಣೆ ಪೂರ್ವದಲ್ಲಿ ಕ್ಷೇತ್ರವನ್ನು ಮಾದರಿ ಮಾಡುತ್ತೇನೆ ಎಂದು ಒಂದು ವರ್ಷ 8 ತಿಂಗಳು ಕಳೆದರೂ ಒಂದು ರೂ ಅನುದಾನ ತಂದಿಲ್ಲ. ಕೇವಲ ಮುಖ್ಯಮಂತ್ರಿಗಳ ವಿರುದ್ದ ಮಾತನಾಡತ್ತಾ ಕಾಲ ಕಳೆಯುತ್ತಿದ್ದಾರೆ ಎಂದು ದೂರಿದರು.
ಗ್ರಾಮಾಂತರ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವಾದರೆ ಖುಷಿ ಪಡಬೇಕು, ಪ್ರಚಾರದ ಗಿಳಿಗಾಗಿ ಆರೋಪ ಮಾಡುವುದು ಸರಿಯಲ್ಲ. ಮುಖ್ಯಮಂತ್ರಿಗಳ ವಿರುದ್ಧ ಪ್ರತಿಭಟಿಸಿದರೆ ರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಪಡೆಯಬಹುದು ಎಂಬ ಹಂಬುತನದ ಜೊತೆಗೆ, ಕ್ರಿಕೆಟ್ ನಿರ್ಮಾಣ ಮಾಡುತ್ತಿರುವುದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್, ಇವರಿಂದ ಕಮಿಷನ್ ಸಿಗುವುದಿಲ್ಲ ಎಂಬ ಹತಾಶೆಗೆ ಒಳಗಾಗಿ, ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ವಿರೋಧಿಸುತಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾತನಾಡಿ, ಪ್ರತಿಪಕ್ಷದ ಮುಖಂಡರು ಪದೇ ಪದೇ ಕಾಂಗ್ರೆಸ್ ಸರಕಾರದಲ್ಲಿ ಅಭಿವೃದ್ಧಿ ಕೆಲಸಗಳೇ ಆಗುತ್ತಿಲ್ಲ ಎಂದು ಸುಳ್ಳು ಆರೋಪ ಮಾಡುತ್ತಾರೆ. ಗುಬ್ಬಿ ಶಾಸಕ ಶ್ರೀನಿವಾಸ್ ಅವರನ್ನು ಮಂತ್ರಿ ಮಾಡುತ್ತೇವೆ ಎಂದು ಕರೆದು ಕೊಂಡು ಮಂಗ ಮಾಡಿದ್ದಾರೆ ಎಂಬ ಶಾಸಕ ಬಿ.ಸುರೇಶಗೌಡರ ಆರೋಪ ಸುಳ್ಳು. ಇಂತಹ ಹೇಳಿಕೆಗಳನ್ನು ಶಾಸಕರು ಕೂಡಲೇ ನಿಲ್ಲಿಸಬೇಕು ಎಂದು ತಾಕೀತು ಮಾಡಿದರು.