ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ಯಾವುದೇ ನೇಮಕಾತಿ ಮಾಡದಂತೆ ಸರ್ಕಾರ ಆದೇಶಿಸಿದ್ದರು ಸಹ ಗೃಹ ಇಲಾಖೆ ನೇಮಕಾತಿಗೆ ಮುಂದಾಗಿರುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ತುಮಕೂರಿನ ವಿವಿ ಅತಿಥಿ ಗೃಹದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಗೃಹ ಇಲಾಖೆ ನೇಮಕಾತಿಗೆ ವಿನಾಯಿತಿ ಕೋರಿ ಪತ್ರ ಬರೆದಿದ್ದು, ಒಳ ಮೀಸಲಾತಿ ಜಾರಿಯಾಗುವವರೆಗೆ ಯಾವುದೇ ನೇಮಕಾತಿ ಮಾಡದಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೊಳಿಸಲು ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ರಚಿಸಿದ್ದು, ಸಮಿತಿಗೆ ಅಗತ್ಯವಾಗಿರುವ ಸೌಲಭ್ಯಗಳನ್ನು, ಸಹಕಾರವನ್ನು ನೀಡುವ ಮೂಲಕ ಕಾಲಮಿತಿಯೊಳಗೆ ಒಳಮೀಸಲಾತಿಯನ್ನು ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲೆಯಲ್ಲಿ ಪರಿಶಿಷ್ಟ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದು, ತುಮಕೂರು ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯನ್ನು ಸ್ಥಾಪಿಸಲು ಸಾಧ್ಯವಾಗಿಲ್ಲ, ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯನ್ನು ಸ್ಥಾಪಿಸಲು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡುವಂತೆ ಕೋರಿದ್ದಾರೆ.
ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ದಲಿತ ಸಂಘರ್ಷ ಸಮಿತಿಯ ಮುಖಂಡರಗಳಾದ ಕೊಟ್ಟ ಶಂಕರ್, ಮರಳೂರು ಕೃಷ್ಣಮೂರ್ತಿ, ಕೇಬಲ್ ರಘು, ಕುಮಾರ್, ಗಾಂಧಿರಾಜ್, ಕಿರಣ್, ರಮೇಶ್ , ಗೋಪಾಲ್ ಇದ್ದರು.