ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ತಡರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಎಸ್.ಎಂ.ಕೃಷ್ಣ ನಿಧನರಾದ ಹಿನ್ನೆಲೆಯಲ್ಲಿ ಡಿ.11ರಂದು ರಾಜ್ಯದ ಎಲ್ಲಾ ಶಾಲಾ ಕಾಲೇಜಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಅಲ್ಲದೆ ಎಲ್ಲಾ ಸರ್ಕಾರಿ ಕಚೇರಿಗಳಿಗೂ ರಜೆಯನ್ನು ಘೋಷಿಸಲಾಗಿದೆ. ಜೊತೆಗೆ ಮೂರು ಶೋಕಾಚರಣೆ ಆಚರಿಸಲಾಗುವುದು ಎಂದು ಹೇಳಿದ್ದಾರೆ.
ಡಿ.11ರಂದು ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆ ನಡೆಯಲಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಹೇಳಿದರು.
ಯುಪಿಎ ಸರ್ಕಾರದ ಅವಧಿಯಲ್ಲಿ ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ವೇಳೆ ಎಸ್.ಎಂ.ಕೃಷ್ಣ ಕೇಂದ್ರ ವಿದೇಶಾಂಗ ಸಚಿವರಾಗಿ ಕೆಲಸ ಮಾಡಿದ್ದರು. ನಂತರ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ.
ಎಸ್.ಎಂ.ಕೃಷ್ಣ ನಿಧನ ಸುದ್ದಿ ತಿಳಿಯುತ್ತಿದ್ದಂತೆಯೇ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಹಲವು ಗಣ್ಯರು ಕೃಷ್ಣ ಅವರ ಪಾರ್ಥೀವ ಶರೀರದ ದರ್ಶನ ಪಡೆದರು.
ಮುಖ್ಯಮಂತ್ರಿ ಸಂತಾಪ:
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು ಎಂದು ಸ್ಮರಿಸಿಕೊಂಡಿದ್ದಾರೆ.
ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ ಎಂದು ಹೇಳಿದ್ದಾರೆ.
ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ತಿಳಿಸಿದ್ದಾರೆ.