ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ಅಭಿವೃದ್ಧಿ ನಿಗಮಗಳಿಗೆ ನೀಡಬೇಕಾದ ಅನುದಾನ ಬಿಡುಗಡೆ ಮಾಡದೆ, ಈ ವರ್ಗದ ಜನರಲ್ಲಿ ಆರ್ಥಿಕ ಶಕ್ತಿ ತುಂಬುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆಪಾದಿಸಿ ತುಮಕೂರು ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.
ಟೌನ್‌ಹಾಲ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಅಹಿಂದ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾಗಿದೆ. ಹಿಂದುಳಿದ ವರ್ಗದ ಜನರ ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ, ಕೃಷಿ ಅನುದಾನ ಬಿಡುಗಡೆ ಮಾಡದೆ ಅನ್ಯಾಯ ಮಾಡಿದೆ. ಹಿಂದಿನ ಬಿಜೆಪಿ ಸರ್ಕಾರ ಹಿಂದುಳಿದವರ ಅಭಿವೃದ್ಧಿಗಾಗಿ ಒಂದು ಸಾವಿರ ಕೋಟಿ ರೂ.ಗಳನ್ನು ನಿಗಮಗಳಿಗೆ ಬಿಡುಗಡೆ ಮಾಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ 1500 ಕೋಟಿ ರೂ.ಗಳಲ್ಲಿ ಕೇವಲ 170 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಆಪಾದಿಸಿದರು.
ರೈತ ಮೋರ್ಚಾ ಮುಖಂಡ ಎಸ್.ಶಿವಪ್ರಸಾದ್ ಮಾತನಾಡಿ, ದೇವರಾಜ ಅರಸು ನಂತರ ತಾವೇ ಹಿಂದುಳಿದ ನಾಯಕ ಎಂದು ಬಿಂಬಿಸಿಕೊಂಡು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಅವರು ಯಾವುದೇ ಪ್ರಾತಿನಿಧ್ಯ ಸಿಗದ ಹಿಂದುಳಿದ ವರ್ಗಗಳ ಸಣ್ಣಪುಟ್ಟ ಸಮುದಾಯಗಳ ಜನರಲ್ಲಿ ಆರ್ಥಿಕ ಶಕ್ತಿ ತುಂಬುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ನೀಡಿದ್ದ ಭರವಸೆಯನ್ನು ಈಡೇರಿಸದೆ ಜನರನ್ನು ದಿಕ್ಕುತಪ್ಪಿಸಿದರು. ರಾಜಕೀಯ ಸ್ವಾರ್ಥಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ಮಂತ್ರ ಜಪಿಸುತ್ತಿದ್ದಾರೆ, ಈ ಸಮುದಾಯಗಳ ಕಲ್ಯಾಣಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಆಪಾದಿಸಿದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ ಮಾತನಾಡಿ, ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಲ್ಲಿ ಹಿಂದುಳಿದ ವರ್ಗದವರು ಆಶಾಭಾವನೆ ಹೊಂದಿದ್ದರು.ಆದರೆ ಒಂದೂವರೆ ವರ್ಷದಲ್ಲೇ ಇವರ ಮುಖವಾಡ ಕಳಚಿಬಿದ್ದಿದೆ. ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಸ್ಥಾಪನೆಗೊಂಡ ನಿಗಮಗಳಿಗೆ ಹಿಂದಿನ ಬೊಮ್ಮಾಯಿ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದಂತೆ 546 ಕೋಟಿ ರೂ ಅನುದಾನ ಬಿಡುಗಡೆ ಮಾಡಿದರೆ, ಸಿದ್ದರಾಮಯ್ಯ ಸರ್ಕಾರ 1500 ಕೋಟಿ ರೂ. ಅನುದಾನ ಘೋಷಿಸಿ ಬಿಡುಗಡೆ ಮಾಡಿರುವುದು ಕೇವಲ 170 ಕೋಟಿ ರೂ. ಎಂದರು.