ಆಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಯ ನೀಡಿದ್ದಾರೆ.
ತಾಲೀಬಾನೀಯರ ದಾಳಿಯ ನಂತರ ಕಾಬೂಲ್ ನಲ್ಲಿ ಸಂಕಷ್ಟದಲ್ಲಿರುವ ಕನ್ನಡಿಗರನ್ನು ಕರೆತರುವ ಪ್ರಯತ್ನವನ್ನು ರಾಜ್ಯ ಸರ್ಕಾರ ನಡೆಸಿದೆ. ಈ ಸಂಬಂಧ ನೋಡಲ್ ಅಧಿಕಾರಿಯನ್ನು ನೇಮಕ ಮಾಡಿದ್ದು ಅವರು ಕಾಬೂಲ್ ಭಾರತ ರಾಯಭಾರಿ ಕಚೇರಿಯ ಸಂಪರ್ಕದಲ್ಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಫ್ಘಾನಿಸ್ತಾನದಲ್ಲಿ ಒಟ್ಟು ಎಷ್ಟು ಕನ್ನಡಿಗರಿದ್ದಾರೆ ಎಂಬ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಎಲ್ಲರನ್ನೂ ಸುರಕ್ಷಿತವಾಗಿ ಕರೆತರುವ ಬಗ್ಗೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ರಿಮೋಟ್ ಪ್ರದೇಶದಲ್ಲಿರುವ ಕನ್ನಡಿಗರನ್ನು ಗುರುತಿಸುವ ಕೆಲಸ ಮಾಡಲಾಗುತ್ತಿದೆ. ಭಾರತ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಈಗಾಗಲೇ 7 ಮಂದಿ ಕನ್ನಡಿಗರು ರಾಜ್ಯಕ್ಕೆ ಸುರಕ್ಷಿತವಾಗಿ ಮರಳಿದ್ದಾರೆ. ಇನ್ನುಳಿದವರ ಬಗ್ಗೆ ಕಾಬೂಲ್ ಭಾರತ ರಾಯಭಾರಿ ಕಚೇರಿಯಿಂದ ಮಾಹಿತಿ ಸಂಗ್ರಹಿಸುತ್ತಿದ್ದೇವೆ ಎಂದು ತಿಳಿಸಿದರು.