ತುಮುಲ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಶಾಸಕ ವೆಂಕಟೇಶ್ ಗೆಲುವು ಸಾಧಿಸುತ್ತಿದ್ದಂತೆಯೇ ಪಾವಗಡ ತಾಲ್ಲೂಕಿನಿಂದ ಆಗಮಿಸಿದ್ದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಬೆಂಬಲಿಗರು ತುಮುಲ್ ಆಡಳಿತ ಕಚೇರಿ ಮುಂಭಾಗ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ತಮ್ಮ ನೆಚ್ಚಿನ ನಾಯಕ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಹರ್ಷೋದ್ಘಾರದ ಜೊತೆಗೆ ಜಯಕಾರ ಕೂಗಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಪಾವಗಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೇಶ್ ಬಾಬು, ಪುರಸಭಾಧ್ಯಕ್ಷ ರಾಜೇಶ್, ಸದಸ್ಯ ರವಿ, ತುಮಕೂರು ಎಪಿಎಂಸಿ ಮಾಜಿ ಅಧ್ಯಕ್ಷ ಉಮೇಶ್, ಮುಖಂಡರಾದ ಮಂಜುನಾಥ್, ಸುರೇಶ್, ಹನುಮಂತರಾಯಪ್ಪ, ಆನಂದಪ್ಪ, ಹೆಚ್.ಜಿ. ರಂಗಪ್ಪ, ಗ್ರಾ.ಪಂ. ಸದಸ್ಯರಾದ ಶ್ರೀರಾಮ್, ಪ್ರಕಾಶ್ ಸೇರಿದಂತೆ ಹಲವು ಮಂದಿ ಪಾಲ್ಗೊಂಡಿದ್ದರು.

ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಹೆಚ್.ವಿ. ವೆಂಕಟೇಶ್, ತುಮಕೂರು ಹಾಲು ಒಕ್ಕೂಟದಲ್ಲಿ ಎಲ್ಲ ನಿರ್ದೇಶಕರ ಸಹಕಾರ ಪಡೆದು ಉತ್ತಮವಾಗಿ ಆಡಳಿತ ನಡೆಸುತ್ತೇನೆ. ಮುಂದಿನ ದಿನಗಳಲ್ಲಿ ಒಕ್ಕೂಟದಲ್ಲಿ ಅಗತ್ಯ ಇರುವ ಬದಲಾವಣೆ ತರಲು ಸಹ ಶ್ರಮಿಸುತ್ತೇನೆ ಎಂದು ತಿಳಿಸಿದರು.
ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸಹಕಾರ ಸಚಿವ ಕೆ.ಎನ್. ರಾಜಣ್ಣ ಹಾಗೂ ಪಕ್ಷದ ಎಲ್ಲ ನಾಯಕರ ಆಶೀರ್ವಾದದಿಂದ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ನನ್ನ ಆಯ್ಕೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಇದಾದ ನಂತರ ನೂತನ ಅಧ್ಯಕ್ಷ ಹೆಚ್.ವಿ. ವೆಂಕಟೇಶ್ ಸಿದ್ದಾರ್ಥ ಮೆಡಿಕಲ್ ಕಾಲೇಜಿಗೆ ತೆರಳಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಹಾಗೂ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರನ್ನು ಭೇಟಿ ಮಾಡಿ ಪುಷ್ಪಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ವೆಂಕಟರಮಣಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಇದ್ದರು.


