ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಕಳೆದ 109 ವರ್ಷಗಳಿಂದ ಕನ್ನಡಪರ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿದೆ. ಸರ್ಕಾರದ ಅಂಗಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿಗೆ ಈಗ ನೀಡುತ್ತಿರುವ ಅನುದಾನದ ಜೊತೆಗೆ ಹೆಚ್ಚುವರಿಯಾಗಿ ಅನುದಾನ ನೀಡಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದರು.
2025-26ನೇ ಸಾಲಿನ ಮುಂಗಡ ಪತ್ರದಲ್ಲಿ ಅನುದಾನಕ್ಕೆ ಒಳಪಡಿಸಲು ಮುಖ್ಯಮಂತ್ರಿಯವರಿಗೆ ಶಿಫಾರಸ್ಸು ಮಾಡಬೇಕೆಂದು ಪದಾಧಿಕಾರಿಗಳು ಮನವಿ ಮಾಡಿದರು.
ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು ಸಕಾರಾತ್ಮಕವಗಿ ಸ್ಪಂದಿಸಿ ಈ ಬಗ್ಗೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಚರ್ಚಿಸುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಕಲಾಗ್ರಾಮದ ಬಗ್ಗೆ ಪ್ರಸ್ತಾಪಿಸಿದಾಗ ಸಚಿವರು `ತುಮಕೂರು ಮ್ಯೂಸಿಯಂ’ ಸ್ಥಾಪಿಸಿ ತುಮಕೂರು ಜಿಲ್ಲೆಯ ಕಲೆ, ಸಾಹಿತ್ಯ, ನಾಟಕ, ಇತಿಹಾಸ, ವಿಜ್ಞಾನ ಎಲ್ಲ ಪ್ರಕಾರದ ವೈಶಿಷ್ಠö್ಯ ಸ್ಥಾಪಿಸೋಣ. ಈ ಬಗ್ಗೆ ಸ್ಥಳ ಗುರುತಿಸಲು ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿ ಎಂದು ತಿಳಿಸಿದರು.
ಸಚಿವರ ಸೂಚನೆಯಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ ಡಿಸಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ, ಪದಾಧಿಕಾರಿಗಳಾದ ಜಿ.ಹೆಚ್. ಮಹದೇವಪ್ಪ, ಚಾಂದು, ನಟರಾಜ್ ಮುಂತಾದವರಿದ್ದರು.