ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತುಮಕೂರು ಜಿಲ್ಲಾ ಸಮಿತಿ ವತಿಯಿಂದ ಭಾರತದ ಅಸ್ಪೃಶ್ಯರ ಮೊದಲ ಪ್ರತಿರೋಧ ಚಳವಳಿ ಮಹಾಡ್ ಸತ್ಯಾಗ್ರಹ ಕುರಿತ ಒಂದು ದಿನದ ವಿಚಾರ ಸಂಕಿರಣವನ್ನು ಮಾ.20ರಂದು ತುಮಕೂರಿನ ಜಿಲ್ಲಾಸ್ಪತ್ರೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿಚಾರ ಸಂಕಿರಣದ ಅಧ್ಯಕ್ಷತೆಯನ್ನು ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ಸದಸ್ಯ ಕುಂದೂರು ತಿಮ್ಮಯ್ಯ ವಹಿಸುವರು. ಚರಕ ಆಸ್ಪತ್ರೆಯ ಡಾ.ಬಸವರಾಜು ಕಾರ್ಯಕ್ರಮ ಉದ್ಘಾಟಿಸುವರು. ಸಹ ಪ್ರಾಧ್ಯಾಪಕ ಡಾ.ನಾಗಭೂಷಣ್ ಬಗ್ಗನಡು ಮತ್ತು ಸಾಮಾಜಿಕ ಹೋರಾಟಗಾರ ವಿ.ಎಲ್.ನರಸಿಂಹಮೂರ್ತಿ ಮುಖ್ಯ ಭಾಷಣಕಾರರಾಗಿ ಮಾತನಾಡುವರು.
ಮುಖ್ಯ ಅತಿಥಿಗಳಾಗಿ ಪತ್ರಿಕೋದ್ಯಮಿ ಎಸ್.ನಾಗಣ್ಣ, ಎಚ್. ಶಿವಕುಮಾರ್, ಡಾ.ಅರುಂಧತಿ, ಜಿಲ್ಲಾ ಸಂಘಟನಾ ಸಂಚಾಲಕ ವಿರೂಪಾಕ್ಷ ಡ್ಯಾಗೇರಹಳ್ಳಿ, ಉಮಾ ಪ್ರಗತಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಕೆಂಪರಾಜು, ಕೆಇಬಿ ದಲಿತ ನೌಕರರ ಒಕ್ಕೂಟದ ಸೋಮಶೇಖರ್ ಮತ್ತಿಹಳ್ಳಿ, ಲಲಿತ ಕಲಾ ಅಕಾಡೆಮಿ ಸದಸ್ಯ ಮನು ಚಕ್ರವರ್ತಿ ಭಾಗವಹಿಸುವರು.
ಇದೇ ವೇಳೆ ಭೂನ್ಯಾಯ ಮಂಡಳಿ ನಾಮಿನಿ ಸದಸ್ಯ ಚೇಳೂರು ಶಿವನಂಜಯ್ಯ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ನಾಮನಿರ್ದೇಶಿತ ಸದಸ್ಯ ಕುಪ್ಪೂರು ಶ್ರೀಧರ್ ಅವರನ್ನು ಸನ್ಮಾನಿಸಲಾಗುವುದು.
ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರು ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿರುವ ಮಹಾಡ್ ನಲ್ಲಿ 1927 ಮಾರ್ಚ್ 20ರಂದು ಸಾರ್ವಜನಿಕವಾಗಿ ಕೆರೆಯ ನೀರನ್ನು ಮುಟ್ಟುವ ಮೂಲಕ ಇದು ಎಲ್ಲರಿಗೂ ಸೇರಿದ್ದು ಎನ್ನುವುದು ಸಾರಿ ಹೇಳಿದರು. ಅಂಬೇಡ್ಕರ್ ಕೆರೆಯ ನೀರು ಮುಟ್ಟಿ 98 ವರ್ಷವಾಗಿರುವ ಹಿನ್ನೆಲೆಯಲ್ಲಿ ಮಹಾಡ್ ಸತ್ಯಾಗ್ರಹದ ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಿಎಸ್ ಎಸ್ ಜಿಲ್ಲಾ ಸಂಚಾಲಕ ಕುಂದೂರು ಮುರಳಿ ತಿಳಿಸಿದ್ದಾರೆ.