ಮುಸ್ಲೀಮರಿಗೆ ಕೊಟ್ಟಿರುವ ಮೀಸಲಾತಿ ಉಳಿಸಿಕೊಳ್ಳುವ ಸಲುವಾಗಿ ಸಂವಿಧಾನ ಬದಲಿಸಲೂ ತಯಾರಾಗಿದ್ದೇವೆ ಎಂದು ಹೇಳಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರತಿಕೃತಿ ದಹನ ಮಾಡಿ ಜಿಲ್ಲಾ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ತುಮಕೂರಿನಲ್ಲಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರಿಗೆ ತಾಕತ್ತಿದ್ದರೆ ಸಂವಿಧಾನ ಬದಲಾವಣೆಗೆ ಕೈ ಹಾಕಲಿ ಎಂದು ಬಿಜೆಪಿ ಮುಖಂಡರು ಸವಾಲು ಹಾಕಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಜಿ.ಬಿ.ಜ್ಯೋತಿಗಣೇಶ್, ಸರ್ಕಾರಿ ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ 4ರಷ್ಟು ಮಿಸಲಾತಿ ನೀಡುವ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿದಾಗ್ಯೂ ಸಿಎಂ ಸಿದ್ದರಾಮಯ್ಯ ಸರ್ಕಾರ ಈ ಬಿಲ್ ಪಾಸ್ ಮಾಡಿದೆ. ಧರ್ಮ ಆಧಾರದಲ್ಲಿ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶವಿಲ್ಲದ ಕಾರಣ ಸಂವಿಧಾನವನ್ನೇ ತಿದ್ದುಪಡಿ ಮಾಡಿ ಮುಸ್ಲೀಮರಿಗೆ ಮೀಸಲಾತಿ ಉಳಿಸಿಕೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿರುವುದು ಖಂಡನೀಯ ಎಂದರು.
ಹೆಸರಿಗೆ ತಾವು ಅಹಿಂದ ನಾಯಕರೆಂದು ಹೇಳಿಕೊಳ್ಳುವ ಕಾಂಗ್ರೆಸ್‌ನವರು ದಲಿತರ ಹಣ, ಅನ್ನಕ್ಕೆ ಕನ್ನ ಹಾಕಿದ್ದಾರೆ. ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಾ ಇತರರನ್ನು ಕಡೆಗಣಿಸುತ್ತಿರುವ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಸರ್ಕಾರದ ವಿರುದ್ಧ ಬಿಜೆಪಿ ವಿರೋಧ ಪಕ್ಷವಾಗಿ ಪರಿಣಾಮಕಾರಿ ಹೋರಾಟ ಮಾಡುತ್ತದೆ ಎಂದು ಹೇಳಿದರು.
ತುಮಕೂರು ಜಿಲ್ಲಾ ಉಪಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ ಮಾತನಾಡಿ, ಧರ್ಮದ ಆಧಾರದಲ್ಲಿ ಯಾವುದೇ ಮೀಸಲಾತಿ ನೀಡಲು ಅವಕಾಶವಿಲ್ಲ ಎಂದು ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನದಲ್ಲಿ ಸ್ಪಷ್ಟವಾಗಿ ಉಲ್ಲೇಖವಿದೆ. ಮುಸಲ್ಮಾನರಿಗೆ ಮೀಸಲಾತಿ ನೀಡುವ ಸಲುವಾಗಿ ಸಂವಿಧಾನವನ್ನೇ ಬದಲಾವಣೆ ಮಾಡಲು ತಯಾರಿದ್ದೇವೆ ಎಂಬ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಉದ್ಧಟತನದ್ದು. ತಾಕತ್ತಿದ್ದರೆ ಸಂವಿಧಾನ ಬದಲಾವಣೆ ಮಾಡಲಿ ಎಂದು ಸವಾಲು ಹಾಕಿದರು.
ರಾಜ್ಯ ಬಿಜೆಪಿ ವಕ್ತಾರ ಹೆಚ್.ಎನ್.ಚಂದ್ರಶೇಖರ್, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಹೆಚ್.ಎ. ಆಂಜನಪ್ಪ, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ವೇದಮೂರ್ತಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನವಚೇತನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್‌ಗೌಡ, ಕಾರ್ಯದರ್ಶಿ ಹೆಚ್.ಎಂ.ರವೀಶಯ್ಯ, ನಗರ ಅಧ್ಯಕ್ಷ ಧನುಷ್, ಮುಖಂಡರಾದ ಟಿ.ಹೆಚ್.ಹನುಮಂತರಾಜು, ಬಂಬೂ ಮೋಹನ್, ಮಲ್ಲಿಕಾರ್ಜುನ್, ಸಿ.ಎನ್.ರಮೇಶ್, ವಿಷ್ಣುವರ್ಧನ್, ಪುಟ್ಟರಾಜು, ಇಂದ್ರಕುಮಾರ್, ಟಿ.ಆರ್.ಸದಾಶಿವಯ್ಯ, ಸತ್ಯಮಂಗಲ ಜಗದೀಶ್, ನಂಜುAಡಸ್ವಾಮಿ ಇದ್ದರು.


