ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಸಮಾಜದ ಪ್ರಗತಿ ಸಾಧ್ಯ. ಇದನ್ನು ಅನೇಕ ದಶಕಗಳ ಹಿಂದೆ ಮನಗಂಡಿದ್ದ ಡಾ. ಬಿ. ಆರ್. ಅಂಬೇಡ್ಕರ್ ದೇಶದ ಪ್ರತಿಯೊಬ್ಬ ನಾಗರಿಕನೂ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂಬ ಅಂಶವನ್ನು ಸಂವಿಧಾನದಲ್ಲಿ ಸೇರಿಸಿದ್ದರು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕರ್ನಾಟಕ ವಿಜ್ಞಾನ ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಅನುದಾನದಿಂದ ತುಮಕೂರು ವಿಶ್ವವಿದ್ಯಾನಿಲಯದ ಬಿದರಕಟ್ಟೆ ಕ್ಯಾಂಪಸ್ ‘ಜ್ಞಾನಸಿರಿ’ಯಲ್ಲಿ ನಿರ್ಮಿಸಲಾಗಿರುವ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಶುಕ್ರವಾರ ಅವರು ಮಾತನಾಡಿದರು.
ವಿಜ್ಞಾನ ಕೇಂದ್ರದ ಮೂಲಕ ವಿಜ್ಞಾನವನ್ನು ಜನಪ್ರಿಯಗೊಳಿಸುವ ಕೆಲಸವಾಗಬೇಕು. ಮೂಲತಃ ತುಮಕೂರು ವಿವಿ ಒಂದು ವಿಜ್ಞಾನ ಮತ್ತು ತಂತ್ರಜ್ಞಾನ ವಿವಿಯಾಗಿ ದೇಶದಲ್ಲಿ ಹೆಸರು ಪಡೆಯಬೇಕು ಎಂಬ ಉದ್ದೇಶದೊಂದಿಗೆ ಅದನ್ನು ಸ್ಥಾಪಿಸಲಾಗಿತ್ತು ಎಂದು ಸ್ಮರಿಸಿದರು.
ಗೆಲಿಲಿಯೋ, ಮೇರಿ ಕ್ಯೂರಿಯಂತಹ ದಾರ್ಶನಿಕ ವಿಜ್ಞಾನಿಗಳು ಭವಿಷ್ಯದ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಅವರು ಕಂಡ ಕನಸುಗಳು ಇಂದು ನನಸಾಗಿವೆ. ಕಂಪ್ಯೂಟರ್ ಜಗತ್ತನ್ನು ಆಳುತ್ತಿದೆ. ಕೃತಕ ಬುದ್ಧಿಮತ್ತೆ ಎಲ್ಲೆಡೆ ಪ್ರಭಾವ ಬೀರುತ್ತಿದೆ. ಆದರೆ ಇದರೊಂದಿಗೆ ಸೈಬರ್ ಅಪರಾಧಗಳೂ ಹೆಚ್ಚುತ್ತಿವೆ. ಯುವಜನತೆ ಇಂತಹ ಪ್ರವೃತ್ತಿಗಳ ಬಗ್ಗೆ ಜಾಗರೂಕರಾಗಿರಬೇಕು ಎಂದರು.
ವಿಜ್ಞಾನ ಕೇಂದ್ರದ ಲೋಕಾರ್ಪಣೆ ಮಾಡಿ ಮಾತನಾಡಿದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಬೋಸರಾಜು, ಉಪಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನಾಗಿ ಉನ್ನತೀಕರಿಸುವ ಕಾರ್ಯವನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು. ಇದಕ್ಕಾಗಿ ಕೇಂದ್ರ ಸರ್ಕಾರದ ನೆರವು ಪಡೆಯಲಾಗುವುದು ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಿ. ಸುರೇಶ್ ಗೌಡ, ಜ್ಞಾನಸಿರಿ ಕ್ಯಾಂಪಸ್‌ಗೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಆದ್ದರಿಂದ ಬಿದರಕಟ್ಟೆಯ ಕೆರೆಗೆ ಹೇಮಾವತಿ ನದಿ ನೀರನ್ನು ಹರಿಸುವ ವ್ಯವಸ್ಥೆ ಮಾಡಬೇಕು. ರಸ್ತೆ ಸೌಲಭ್ಯವನ್ನೂ ಅಭಿವೃದ್ಧಿಪಡಿಸಬೇಕು ಎಂದು ತಿಳಿಸಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಒಂದು ತಾರಾಲಯವನ್ನು ನಿರ್ಮಿಸಿಕೊಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿಕೊಂಡರು. ಜ್ಞಾನಸಿರಿ ಕ್ಯಾಂಪಸ್‌ಗಾಗಿ ಕೇಂದ್ರದಿಂದ ಅನುದಾನ ತರುವ ಭರವಸೆ ನೀಡಿದರು.
ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ. ವೆಂಕಟೇಶ್ವರಲು, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು ಜಿ., ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವೆ ನಾಹಿದಾ ಜಮ್ ಜಮ್., ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನ ಕುಮಾರ್, ಗಳಿಗೇನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ದೇವರಾಜು, ನಾಗವಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಗಳಗೌರಮ್ಮ ಇದ್ದರು.