Wednesday, April 23, 2025
Google search engine
Homeಮುಖಪುಟಮೇ.1 ರಂದು ಪೌರ ಕಾರ್ಮಿಕರ ಸೇವೆ ಕಾಯಂ-ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ 

ಮೇ.1 ರಂದು ಪೌರ ಕಾರ್ಮಿಕರ ಸೇವೆ ಕಾಯಂ-ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ 

ಮೇ.1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. 

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25 ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ ಎಂದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಕಾಯಂ ಮಾಡಲಾಗುವುದು ಎಂದರು.

ಪೌರ ಕಾರ್ಮಿಕರ ಜೊತೆಗೆ ವಾಹನ ಚಾಲಕರ ಸೇವೆಯನ್ನೂ ಗುತ್ತಿಗೆಯಿಂದ ತೆಗೆದು ಕಾಯಂ‌ಮಾಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು. ಪೌರ ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಬೇಕು. ವಿದ್ಯಾವಂತರಾದರೆ ಮಾತ್ರ ಸ್ವಾಭಿಮಾನಿಗಳಾಗಲು ಸಾಧ್ಯ. ಮಕ್ಕಳಿಗೆಲ್ಲಾ ಶಿಕ್ಷಣ ಕೊಡಿಸಿ. ಪ್ರತಿಯೊಬ್ಬರೂ ಪ್ರತಿಭಾವಂತರೇ. ಅವಕಾಶ ಸಿಗುವುದಷ್ಟೆ ಮುಖ್ಯ. ಅವಕಾಶ ಸಿಕ್ಕರೆ ಎಲ್ಲರೊಳಗಿನ  ಪ್ರತಿಭೆ ಹೊರಗೆ ಬರುತ್ತದೆ ಎಂದರು. 

ಪೌರ ಕಾರ್ಮಿಕ ಸಮುದಾಯಕ್ಕೆ ನಗದು ರಹಿತ ಆರೋಗ್ಯ ಕಾರ್ಡ್ ನೀಡಲಾಗುವುದು‌. ಕಾರ್ಮಿಕರ ಸಿಂಧುತ್ವದ ಸಮಸ್ಯೆ ಬಗೆಹರಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

ಪೌರ ಕಾರ್ಮಿಕರ ಸಂಬಳವನ್ನು 7 ಸಾವಿರದಿಂದ 17 ಸಾವಿರಕ್ಕೆ ಏರಿಸಿದ್ದು ಇದೇ ಸಿದ್ದರಾಮಯ್ಯ ಎಂದರು. ನೀವೆಲ್ಲಾ ಈಗ ಕಷ್ಟ ಪಟ್ಟು ಶುಚಿತ್ವದ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಮಕ್ಕಳೂ ಇದೇ ಕೆಲಸ ಮಾಡಬಾರದು. ನಿಮ್ಮ ಮಕ್ಕಳು ಇತರೆ ಕೆಲಸಗಳಿಗೆ ಹೋಗಬೇಕು. ಆ ರೀತಿ ನೀವು ಬೆಳೆಯಬೇಕು. ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular