ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವುದನ್ನು ಖಂಡಿಸಿ, ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಎನ್.ಎಸ್.ಯು.ಐ. ನೇತೃಥ್ವದಲ್ಲಿ ಮೈಸೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆದಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಗೃಹ ಸಚಿವರು ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಬಿಜೆಪಿ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ ಮತ್ತು ವಿದ್ಯಾರ್ಥಿಗಳು, ಹೆಣ್ಣು ಮಕ್ಕಳನ್ನು ರಕ್ಷಿಸುವಲ್ಲಿ ವಿಫಲವಾಗಿದೆ. ತಕ್ಷಣ ಮುಖ್ಯಮಂತ್ರಿ ಮತ್ತು ಗೃಹಮಂತ್ರಿಗಳು ರಾಜೀನಾಮೆ ನೀಡಬೇಕೆಂದು ಮೈಸೂರಿನಲ್ಲಿ ಎನ್.ಎಸ್.ಯು.ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಗ್ರಹಿಸಿದರು.
ಮುಂದಿನ ದಿನಗಳಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಕಾಪಾಡುವುದು ಸರ್ಕಾರದ ಕರ್ತವ್ಯ. ಇದೇ ರೀತಿ ಕಾನೂನು ಸುವ್ಯವಸ್ಥೆ ಹದಗೆಟ್ಟಲ್ಲಿ ಎನ್.ಎಸ್.ಯು.ಐ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಮೈಸೂರು ಘಟಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಮುದ್ದೇಬಿಹಾಳದಲ್ಲಿ ವಿಜಯಪುರ ಎನ್ ಎಸ್ ಯು ಐ ವತಿಯಿಂದ ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರವನ್ನು ವಿರೋಧಿಸಿ ಮೇಣದಬತ್ತಿ ಹಚ್ಚಿ ಪ್ರತಿಭಟನೆ ನಡೆಸಲಾಗಿದೆ. ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದರು.
ಇದೇ ವೇಳೆ ಬೆಂಗಳೂರಿನ ಮೌರ್ಯ ವೃತ್ತದಲ್ಲೂ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು. ಬಿ.ಕೆ.ಹರಿಪ್ರಸಾದ್ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿ ಸರ್ಕಾರ ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳ ಬಗ್ಗೆ ಕಠಿಣ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ದೂರಿದರು.