ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನೀಡಿರುವ ಜಾತಿ ಗಣತಿ ವರದಿ ಸೇರಿದಂತೆ ಹಲವು ಕಾರಣಗಳಿಂದ ತೆರೆ ಮರೆಗೆ ಸರಿದಿದ್ದ, ಅಧಿಕಾರ ಹಂಚಿಕೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
ಹಠಾತ್ ವಿದ್ಯಮಾನವೊಂದರಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ. ಕೆ.ಎಚ್. ಮುನಿಯಪ್ಪ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.ಈ ಹಿನ್ನೆಲೆಯಲ್ಲಿ ಜಾರಕಿಹೊಳಿ ಅವರು ಇವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಈ ವೇಳೆ, ಕೆಪಿಸಿಸಿ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಬದಲಾವಣೆಯಾದಲ್ಲಿ, ಯಾರಿಗೆ ಅವಕಾಶ ಸಿಗಬೇಕು ಎಂಬ ಬಗ್ಗೆ ಇಬ್ಬರು ನಾಯಕರು ಗಂಭೀರ ಸಮಾಲೋಚನೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸತೀಶ ಜಾರಕಿಹೊಳಿ ಅವರು, ಎಡಗೈ ಪಂಗಡವನ್ನು ಪ್ರತಿನಿಧಿಸುವ ಸಚಿವರ ವಿಶ್ವಾಸಗಳಿಸುವತ್ತ ಹೆಜ್ಜೆ ಇಟ್ಟಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಲಾವಣೆಗೆ ಹೈಕಮಾಂಡ್ ಮುಂದಾದರೆ ತಮ್ಮನ್ನು ಬೆಂಬಲಿಸುವಂತೆ ಮುನಿಯಪ್ಪ ಅವರನ್ನು ಕೋರಿದ್ದಾರೆ ಎನ್ನಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ನಮ್ಮ ನಿವಾಸಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಉಪಹಾರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಕೆಲವು ರಸ್ತೆಗಳಿಗೆ ಹಣ ಬಿಡುಗಡೆ ಮಾಡುವ ಕುರಿತು ಚರ್ಚೆ ನಡೆಸಿದ್ದೇವೆ ವಿನಃ ಬೇರೆ ರಾಜಕೀಯ ವಿಚಾರಗಳ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಹೇಳಿದರು.


