ಹೆದ್ದಾರಿ ರಸ್ತೆ ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಕಾಮಗಾರಿ ಗುಣಮಟ್ಟದಲ್ಲಿ ಯಾವುದೇ ರೀತಿಯ ರಾಜಿ ಇರುವುದಿಲ್ಲ. ಕಾಮಗಾರಿ ಗುಣಮಟ್ಟದಿಂದ ಕೂಡಿರದಿದ್ದರೆ ಅದನ್ನು ನಾನು ಸಹಿಸುವುದಿಲ್ಲ. ಅಂತಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಎಚ್ಚರಿಕೆ ನೀಡಿದರು.
ತುಮಕೂರು ಜಿಲ್ಲೆಯ ತುರುವೇಕೆರೆ-ತಿಪಟೂರು ತಾಲ್ಲೂಕಿನ ಗಡಿಭಾಗ ಕುಂದೂರು ಬಳಿ ರಾಷ್ಟ್ರೀಯ ಹೆದ್ದಾರಿ 150ಎ ನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಅವರು ಮಾತನಾಡಿದರು.
ಅಧಿಕಾರಿಗಳು ಮತ್ತು ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಲು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಅವರು ಹೇಳಿದರು.
ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕಾರಣ ಮಾಡಬೇಕು. ಉಳಿದಂತೆ ಅಭಿವೃದ್ಧಿ ಕಾರ್ಯಗಳು ಸದ್ದು ಮಾಡಬೇಕು. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿ ಎಂದು ಹೇಳಿದರು.
ಅಭಿವೃದ್ಧಿ ವಿಚಾರದಲ್ಲಿ ನಾನು ರಾಜಕಾರಣ ಮಾಡುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ಪಕ್ಷ. ಉಳಿದ ದಿನಗಳಲ್ಲಿ ಪಕ್ಷಾತೀತವಾಗಿ ಕೆಲಸ ಮಾಡಬೇಕು. ಯಾವುದೇ ಪಕ್ಷದವರಿಗೆ ನನ್ನಿಂದ ಒಂದು ಸಣ್ಣ ಅಪಚಾರವಾಗಿದ್ದರೆ ನಾನು ಒಂದು ಸೆಕೆಂಡ್ ಸಹ ರಾಜಕಾರಣದಲ್ಲಿ ಇರುವುದಿಲ್ಲ ಎಂದರು.
ಸರ್ಕಾರಗಳಿಗೆ ತೆರಿಗೆ ರೂಪದಲ್ಲಿ ಬರುವ ಸಾರ್ವಜನಿಕರ ಹಣವನ್ನು ಇನ್ನೊಂದು ರೀತಿಯಲ್ಲಿ ಅಂದರೆ ಅಭಿವೃದ್ಧಿ ಕಾರ್ಯಗಳ ಮುಖೇನ ಸಾರ್ವಜನಿಕರಿಗೆ ಸಮರ್ಪಿಸುವ ಕೆಲಸಕ್ಕೆ ನಾನು ಒತ್ತು ನೀಡುತ್ತಿದ್ದೇವೆ ಎಂದು ತಿಳಿಸಿದರು.


