Thursday, January 29, 2026
Google search engine
Homeಜಿಲ್ಲೆಸಂಕಷ್ಟದಲ್ಲಿರುವ ಮಕ್ಕಳನ್ನು ರಕ್ಷಿಸಲು ಸಮನ್ವಯದಿಂದ ಕೆಲಸ ಮಾಡಲು ಸಲಹೆ

ಸಂಕಷ್ಟದಲ್ಲಿರುವ ಮಕ್ಕಳನ್ನು ರಕ್ಷಿಸಲು ಸಮನ್ವಯದಿಂದ ಕೆಲಸ ಮಾಡಲು ಸಲಹೆ

ಸಂಕಷ್ಟದಲ್ಲಿನ ಮಕ್ಕಳನ್ನು ರಕ್ಷಿಸಿ ಅವರಿಗೆ ಸೂಕ್ತ ಪುನರ್ವಸತಿ ಕಲ್ಪಿಸಿ, ಮುಖ್ಯವಾಹಿನಿಗೆ ಸೇರಿಸುವಲ್ಲಿ ಮಕ್ಕಳ ರಕ್ಷಣಾ ವ್ಯವಸ್ಥೆಯಲ್ಲಿರುವ ಎಲ್ಲಾ ಭಾಗೀದಾರರು ಸಮನ್ವಯದಿಂದ ಕೆಲಸ ಮಾಡಬೇಕಾದ ಅಗತ್ಯವಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ತಿಳಿಸಿದರು.

ತುಮಕೂರಿನ ಬಾಲ ಮಂದಿರದಲ್ಲಿ ನಡೆದ ಮಕ್ಕಳ ಕಲ್ಯಾಣ ಸಮಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಹಾಗೂ ಬಾಲಮಂದಿರಗಳ ಸಿಬ್ಬಂದಿಗಳು ಹಾಗೂ ಅಧಿಕಾರಿಗಳ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ದೊಡ್ಡ ಜಿಲ್ಲೆಗಳಲ್ಲಿ ಒಂದಾದ ತುಮಕೂರು ಜಿಲ್ಲೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು, ಅಪ್ರಾಪ್ತ ಹೆಣ್ಣು ಮಕ್ಕಳ ಗರ್ಭಧಾರಣೆ ಪ್ರಕರಣಗಳು, ಮಕ್ಕಳ ಅಪೌಷ್ಟಿಕತೆ, ಇತ್ಯಾದಿ ಸವಾಲುಗಳು ಮಕ್ಕಳನ್ನು ಕಾಡುತ್ತಿದ್ದು ಇದಕ್ಕೆ ಪರಿಣಾಮಕಾರಿ ಕಾರ್ಯಾಚರಣೆ ಮಾಡಲು ಹಾಗೂ ಸಂತ್ರಸ್ಥ ಮಕ್ಕಳಿಗೆ ಸಕಾಲಿಕ ನ್ಯಾಯದಾನ ಹಾಗೂ ಪುನರ್ವಸತಿ ಕಲ್ಪಿಸಲು ಸಂಘಟಿತ ಪ್ರಯತ್ನ ಅತ್ಯಾವಶ್ಯಕ. ಈ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪರಸ್ಪರ ಸಹಕಾರ ಮತ್ತು ಬದ್ದತೆಯಿಂದ ಕೆಲಸ ಮಾಡಬೇಕಿದೆ ಎಂದರು. ಇದಕ್ಕಾಗಿ ಪ್ರತೀ ಮೂರು ತಿಂಗಳಿಗೊಮ್ಮೆ ಸಮನ್ವಯ ಸಭೆ ನಡೆಸಿ ಪ್ರಗತಿ ಪರಿಶೀಲನೆಗೆ ಕ್ರಮವಹಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಯೋಜಿತ ಕಾರ್ಯಚಟುವಟಿಕೆಗಳು ಹಾಗೂ ವ್ಯಾಪಕ ಅರಿವು ಕಾರ್ಯಾಗಾರಗಳು ಅತ್ಯಗತ್ಯ. ಮಕ್ಕಳಲ್ಲಿ ಮೊಬೈಲ್ ಬಳಕೆ ಹೆಚ್ಚುತ್ತಿದ್ದು ಇದು ಮಕ್ಕಳ ಆರೋಗ್ಯದ ಮೇಲಷ್ಟೇ ಅಲ್ಲದೇ ದೌರ್ಜನ್ಯಕ್ಕೂ ಕಾರಣವಾಗುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಮಕ್ಕಳ ರಕ್ಷಣಾ ಘಟಕ ಮತ್ತಷ್ಟು ಚುರುಕಾಗಿ ಕೆಲಸ ಮಾಡಬೇಕೆಂದರು.

ನೂತನವಾಗಿ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾಗಿ ಸೌಮ್ಯ, ಆಶಾ ಹಾಗೂ ಡಾ.ಟ.ವಿ. ಕುಮಾರ್ ಅವರನ್ನು ನೇಮಕ ಮಾಡಲಾಯಿತು. ರಕ್ಷಣಾಧಿಕಾರಿಗಳಾದ ಶಿವಣ್ಣ, ಗೌತಮ್ ಹಾಗೂ ಮಕ್ಕಳ ಸಹಾಯವಾಣಿ ಸಂಯೋಜಕಿ ಅನುಷಾ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular