Friday, June 13, 2025
Google search engine
Homeಮುಖಪುಟಅಧಿಕಾರ ವಿಕೇಂದ್ರೀಕರಣದಿಂದ ಪಂಚಾಯಿತಿಗಳಲ್ಲಿ ಅಭಿವೃದ್ಧಿ

ಅಧಿಕಾರ ವಿಕೇಂದ್ರೀಕರಣದಿಂದ ಪಂಚಾಯಿತಿಗಳಲ್ಲಿ ಅಭಿವೃದ್ಧಿ

ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯಿಂದ ಪಂಚಾಯತಿಗಳಲ್ಲಿ ಅಭಿವೃದ್ಧಿ ಕಾಣಲು ಸಾಧ್ಯವಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.

ತುಮಕೂರು ನಗರದ ಹೊರವಲಯ ಸಿದ್ಧಾರ್ಥನಗರದ ಗಂಗಾಧರಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗಾಗಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯತಿಗಳನ್ನು ಮತ್ತಷ್ಟು ಬಲಪಡಿಸಲು ಕಾರ್ಯಾಗಾರವನ್ನು ಏರ್ಪಡಿಸಲಾಗಿದ್ದು, ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ತೆರಿಗೆ ವಸೂಲಾತಿ, ಸ್ವಚ್ಛತೆ, ಮಹಿಳಾ ಸಬಲೀಕರಣ, ನಿವೇಶನ/ಮನೆ ಹಂಚಿಕೆ, ಆರ್ಥಿಕ ಶಿಸ್ತಿನ ನಿರ್ವಹಣೆ ಬಗ್ಗೆ ಈ ಕಾರ್ಯಾಗಾರದಲ್ಲಿ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

ಆಡಳಿತ ವಿಕೇಂದ್ರೀಕರಣ ವ್ಯವಸ್ಥೆಯು ಮಹಾತ್ಮ ಗಾಂಧೀಜಿಯವರ ಪರಿಕಲ್ಪನೆಯಾಗಿತ್ತು. ಗ್ರಾಮೀಣ ಪ್ರದೇಶಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ರಾಜಧಾನಿಗಳಲ್ಲಿ ಯೋಜನೆಗಳನ್ನು ರೂಪಿಸುವುದರಿಂದ ಗ್ರಾಮಗಳು ಅಭಿವೃದ್ಧಿಯಾಗುವುದಿಲ್ಲವೆಂದು ಮನಗಂಡ ಸರ್ಕಾರವು ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯನ್ನು ಜಾರಿಗೆ ತಂದಿತು. ಈ ವ್ಯವಸ್ಥೆಯಿಂದ ದೇಶದಲ್ಲಿ ಲಕ್ಷಾಂತರ ಮಹಿಳೆಯರು ಸ್ಥಳೀಯ ಆಡಳಿತದ ಅಧಿಕಾರದ ಚುಕ್ಕಾಣಿ ಹಿಡಿದು ಯಶಸ್ಸು ಕಂಡಿದ್ದಾರೆ. ಗ್ರಾಮ ಪಂಚಾಯುತಿ ಅಧ್ಯಕ್ಷ, ಉಪಾಧ್ಯಕ್ಷರಾಗಲು ಯಾವುದೇ ರಾಜಕೀಯ, ಶೈಕ್ಷಣಿಕ ಹಿನ್ನೆಲೆ ಹೊಂದಿರಬೇಕಾಗಿಲ್ಲ. ಉತ್ತಮ ಪ್ರಜಾ ಸೇವಾ ಮನೋಭಾವ ಹೊಂದಿರುವ ಯಾವುದೇ ಅಭ್ಯರ್ಥಿ ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧಿಸಿ ಅಧ್ಯಕ್ಷ/ಉಪಾಧ್ಯಕ್ಷರ ಅಧಿಕಾರ ಹೊಂದಬಹುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ 2023-24ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ ಸರ್ಕಾರ ನಿಗದಿಪಡಿಸಿದ್ದ 42ಲಕ್ಷ ಮಾನವ ದಿನಗಳ ಸೃಜನೆಯ ಗುರಿಗೆ 63ಲಕ್ಷ ಮಾನವ ದಿನಗಳನ್ನು ಸೃಜಿಸುವ ಮೂಲಕ ತುಮಕೂರು ಜಿಲ್ಲಾ ಪಂಚಾಯಿತಿಯು ನರೇಗಾ ಪ್ರಗತಿಯಲ್ಲಿ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಈ ಯೋಜನೆಯಡಿ 650 ಕೋಟಿ ರೂ.ಗಳನ್ನು ವೆಚ್ಚ ಮಾಡಿ ಬಡವರಿಗೆ ಉದ್ಯೋಗ ಕಲ್ಪಿಸುವುದರೊಂದಿಗೆ ಮೂಲಸೌಕರ್ಯದ ಆಸ್ತಿಗಳನ್ನು ನಿರ್ಮಿಸಲಾಗಿದೆ. ಈ ಯೋಜನೆಯಡಿ 122 ಕೋಟಿ ವೆಚ್ಚದಲ್ಲಿ ಶಾಲಾ ಕಟ್ಟಡ, ಶೌಚಾಲಯ, ಆಟದ ಮೈದಾನ, ಆವರಣ ಗೋಡೆ ನಿರ್ಮಾಣ ಮಾಡಿ ರಾಜ್ಯಕ್ಕೆ ಮಾದರಿಯಾಗಿದೆ ಎಂದು ತಿಳಿಸಿದರು.

ಇಲಾಖೆಗಳಲ್ಲಿರುವ ಕೆಲವು ನ್ಯೂನತೆಗಳನ್ನು ಸರಿಪಡಿಸಿಕೊಳ್ಳಬೇಕು. ಗ್ರಾಮೀಣ ಪ್ರದೇಶಗಳನ್ನು ಪರಿಣಾಮಕಾರಿಯಾಗಿ ಅಭಿವೃದ್ಧಿಪಡಿಸಲು ಪಂಚಾಯತಿ ಜನಪ್ರತಿನಿಧಿಗಳು, ಪಿಡಿಓಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಜನರಿಗೆ ಆರ್ಥಿಕ ಶಕ್ತಿ ನೀಡಬೇಕೆಂದು ಸರ್ಕಾರ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದು, ಹಳ್ಳಿಗಾಡಿನ ಕೂಲಿಕಾರ್ಮಿಕರಿಗೂ ತಾನು ಬಡವನೆಂಬ ಭಾವನೆ ದೂರವಾಗುವ ರೀತಿಯಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕೆಂದು ಸೂಚನೆ ನೀಡಿದರು.

ಶಾಸಕ ಸುರೇಶ್ ಗೌಡ, ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿದರು. ಜಿ.ಪಂ. ಸಿಇಒ ಜಿ. ಪ್ರಭು ಪ್ರಾಸ್ತಾವಿಕವಾಗಿ ಮಾತನಾಡಿದರು. ತುಮುಲ್ ಅಧ್ಯಕ್ಷ ಹಾಗೂ ಪಾವಗಡ ಶಾಸಕ ಹೆಚ್.ವಿ.ವೆಂಕಟೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಎಸ್‌ಪಿ ಅಶೋಕ್ ಕೆ.ವಿ. ಹಾಗೂ ವಿವಿಧ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಓಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular