ತುಮಕೂರು ಜಿಲ್ಲೆಗೆ ಹಂಚಿಕೆಯಾಗಿರುವ ಹೇಮಾವತಿ ನೀರನ್ನು ರಾಮನಗರ ಮತ್ತು ಮಾಗಡಿ ತಾಲೂಕಿಗೆ ಹರಿಸಲು ಕುಣಿಗಲ್ ತಾಲೂಕಿನಲ್ಲಿ ನಡೆಯುತ್ತಿರುವ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಯನ್ನು ಕೂಡಲೇ ನಿಲ್ಲಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ.ಸುರೇಶ್‌ಗೌಡ ಎಚ್ಚರಿಕೆ ನೀಡಿದ್ದಾರೆ.
ತುಮಕೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ನಿರ್ಮಾಣಕ್ಕೆ ಪೊಲೀಸ್ ಸರ್ಪಗಾವಲಿನಲ್ಲಿ ಕಾಮಗಾರಿ ನಡೆಯುತ್ತಿದ್ದು, ಇದನ್ನು ಗಮನಿಸಿದ ರೈತರು, ಸಾರ್ವಜನಿಕರು ಬಿಜೆಪಿಯ ಅನೇಕ ಮುಖಂಡರು ಸ್ಥಳಕ್ಕೆ ತೆರಳಿ ಪ್ರತಿಭಟನೆಗೆ ಮುಂದಾದಾಗ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದು ಸರಿಯಲ್ಲ ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಡಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರೊಂದಿಗೆ ದೂರವಾಣಿ ಕರೆ ಮಾಡಿ ಕಾಮಗಾರಿ ನಡೆಯುತ್ತಿರುವ ಬಗ್ಗೆ ಪ್ರಸ್ತಾಪಿಸಿದ್ದು ತುಮಕೂರು ಜಿಲ್ಲೆಯ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳು, ಗಣ್ಯರು, ಮುಖಂಡರು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರ ಸಭೆಯನ್ನು ಭಾನುವಾರ ಕರೆದು ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಲು ಸರ್ವಪಕ್ಷ ನಿಯೋಗವೊಂದನ್ನು ಕೊಂಡೊಯ್ಯಲು ನಿರ್ಧರಿಸಿದ್ದು ಶೀಘ್ರದಲ್ಲೆ ಈ ಬಗ್ಗೆ ನಿರ್ಧಾರ ತಿಳಿಸಲಾಗುವುದು ಎಂದರು.
ಶಾಸಕ ಜಿ.ಬಿ. ಜ್ಯೋತಿಗಣೇಶ್ ಮಾತನಾಡಿ, ಜಿಲ್ಲೆಗೆ ನಿಗದಿಯಾಗಿರುವ ಹೇಮಾವತಿ ನೀರಿನಲ್ಲಿ ಕುಣಿಗಲ್ ತಾಲೂಕಿಗೆ ಶೇ.12ರಷ್ಟು ನೀರು ನಿಗದಿಯಾಗಿದ್ದು ಆ ನೀರನ್ನು ಹರಿಸಿಕೊಳ್ಳಲು ನಮ್ಮ ವಿರೋಧವಿಲ್ಲ. ಜಿಲ್ಲೆಯ ಪಾಲಿನ ನೀರನ್ನು ರಾಮನಗರ, ಮಾಗಡಿಗೆ ಹರಿಸುವುದಕ್ಕೆ ನಮ್ಮ ತೀವ್ರ ವಿರೋಧವಿದೆ ಎಂದು ಹೇಳಿದರು.
ಗುಬ್ಬಿ ತಾಲೂಕಿನ ಬಿಜೆಪಿ ಮುಖಂಡ ದಿಲೀಕ್ ಕುಮಾರ್ ಮಾತನಾಡಿ, ಸರ್ಕಾರಿ ಜಾಗ ಮುಜರಾಯಿ ದೇವಾಲಯಗಳ ಆಸ್ತಿಗಳಲ್ಲಿ ಕಾಮಗಾರಿ ನಡೆಯುತ್ತಿದ್ದು ಇದಕ್ಕಾಗಿ ಸಾವಿರಾರು ಪೊಲೀಸರ ಬಂದೋಬಸ್ತ್ ಮಾಡಲಾಗಿದೆ. ಮುಜರಾಯಿ ಇಲಾಖೆ ದೇವಸ್ಥಾನಗಳಿಗೆ ಸೇರಿದ ಆಸ್ತಿಯನ್ನು ಭೂಸ್ವಾಧೀನಪಡಿಸಿಕೊಳ್ಳದೆ ಅದಕ್ಕೆ ಅಗತ್ಯ ಪರಿಹಾರ ನೀಡದೆ ಕಾಮಗಾರಿ ಆರಂಭಿಸುವಂತಿಲ್ಲ ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್, ಮುಖಂಡರಾದ ಎಸ್. ವಿಜಯಕುಮಾರ್, ಟಿ.ಆರ್.ಸದಾಶಿವಯ್ಯ, ಗೂಳೂರು ಶಿವಕುಮಾರ್, ಜ್ಯೋತಿ ತಿಪ್ಪೇಸ್ವಾಮಿ, ಜಗದೀಶ್ ಇದ್ದರು.


