Thursday, January 29, 2026
Google search engine
Homeಜಿಲ್ಲೆ'ಪರಿಸರ ನಾಶವಾದರೆ ನಮಗೆ ಉಳಿಗಾಲವಿಲ್ಲ'-ನ್ಯಾ.ನಾರಾಯಣಸ್ವಾಮಿ

‘ಪರಿಸರ ನಾಶವಾದರೆ ನಮಗೆ ಉಳಿಗಾಲವಿಲ್ಲ’-ನ್ಯಾ.ನಾರಾಯಣಸ್ವಾಮಿ

ಪರಿಸರ ನಾಶವಾದರೆ ನಮಗೆ ಉಳಿಗಾಲವಿಲ್ಲ. ಈ ನಿಟ್ಟಿನಲ್ಲಿ ಪರಿಸರ ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಭಾರತದ ಲೋಕಪಾಲ್ ನ್ಯಾಯಾಂಗ ಸದಸ್ಯ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ತಿಳಿಸಿದ್ದಾರೆ.

ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಶನಿವಾರ ತುಮಕೂರು ತಾಲೂಕು ಬೆಳ್ಳಾವಿ ಹೋಬಳಿ ಬಳ್ಳಾಪುರ ಮೀಸಲು ಅರಣ್ಯ ಪ್ರದೇಶದಲ್ಲಿ ಏರ್ಪಡಿಸಿದ್ದ ತಾಯಿಯ ಹೆಸರಿನಲ್ಲಿ ಒಂದು ಗಿಡ-ವನ ಮಹೋತ್ಸವ ಹಾಗೂ ಪರಿಸರ ಅರಿವು ಕಾರ್ಯಕ್ರಮಕ್ಕೆ ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು. ಹಳೆಯ ತಲೆಮಾರಿನವರು ನೆಟ್ಟ ಮರಗಳ ನೆರಳಿನಲ್ಲಿ ನಾವಿಂದು ಪ್ರಕೃತಿಯ ಸೌಂದರ್ಯವನ್ನು ಸವಿಯುತ್ತಿದ್ದೇವೆ. ಈ ಗಿಡ-ಮರಗಳಿಂದ ಪ್ರಾಣಿ-ಪಕ್ಷಿಗಳಿಗೆ ಆಹಾರ ದೊರೆಯುತ್ತಿದೆ. ಜನವಸತಿ ಪ್ರದೇಶಗಳ ವಿಸ್ತರಣೆಗಾಗಿ ಸಕಲ ಜೀವರಾಶಿಗಳ ಬದುಕಿಗೆ ಆಸರೆಯಾಗಿರುವ ಮರಗಳನ್ನು ಕಡಿದು ಹಾಕುತ್ತಿರುವುದು ಶೋಚನೀಯ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ಕರ್ನಾಟಕ ಉಪ ಲೋಕಾಯುಕ್ತ ಕೆ.ಎನ್. ಫಣಿಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿ ಗಿಡ-ಮರಗಳನ್ನು ತಾಯಿಯಂತೆ ಪೋಷಿಸಿ ರಕ್ಷಿಸಬೇಕು. ಪ್ರತಿಯೊಬ್ಬರೂ ತಮ್ಮ ತಾಯಿಯ ಹೆಸರಿನಲ್ಲಿ ಒಂದೊಂದು ಗಿಡ ನೆಟ್ಟು ಪೋಷಿಸಬೇಕೆಂದು ಕರೆ ನೀಡಿದರು.

ಕರ್ನಾಟಕ ಉಪಲೋಕಾಯುಕ್ತ ನ್ಯಾ: ಬಿ. ವೀರಪ್ಪ ಮಾತನಾಡಿ, ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಅಭಿವೃದ್ಧಿಯ ಹೆಸರಿನಲ್ಲಿ ಮರಗಳ ಮಾರಣ ಹೋಮವಾಗುತ್ತಿದೆ. ಇದರಿಂದ ಪ್ರಕೃತಿ ವಿಕೋಪಗಳು ಸಂಭವಿಸುತ್ತಿವೆ. ಪರಿಸರವನ್ನು ಉಳಿಸಿ-ಬೆಳೆಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾದುದು. ಪ್ರತಿಯೊಬ್ಬ ವಿದ್ಯಾರ್ಥಿಯೂ ಒಂದೊಂದು ಗಿಡ ನೆಡುವ ಮೂಲಕ ಪರಿಸರವನ್ನು ಸಂರಕ್ಷಿಸಲು ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.

ಮಾಜಿ ಅಡ್ವೊಕೇಟ್ ಜನರಲ್ ಪ್ರೊ. ರವಿವರ್ಮ ಕುಮಾರ್ ಮಾತನಾಡಿ, ಶಾಲಾ ಮಕ್ಕಳು ಈಗಿನಿಂದಲೇ ತಮ್ಮ ಶಾಲೆಗಳಲ್ಲಿರುವ ಖಾಲಿ ಜಾಗದಲ್ಲಿ ಗಿಡ ನೆಟ್ಟು ಪ್ರತೀ ದಿನ ನೀರೆರೆದು ಮಗುವಂತೆ ಪೋಷಿಸಬೇಕು ಎಂದರು. ತಮ್ಮ ವಿದ್ಯಾರ್ಥಿಜೀವನದಲ್ಲಿ ಹಿರಿಯೂರಿನ ವಾಣಿ ವಿಲಾಸ ಸಾಗರದ ಬಳಿ ಸಾವಿರಕ್ಕೂ ಹೆಚ್ಚು ಗಿಡ ನೆಟ್ಟು ಪ್ರಥಮ ಬಹುಮಾನ ಪಡೆದಿದ್ದ ನೆನಪುಗಳನ್ನು ಮೆಲುಕು ಹಾಕಿದರು.
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಹೆಚ್. ಅನುಪಮ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ಮೊಹಮ್ಮದ್ ತಬ್ರೆಜ್ ಆಲಂ ಶರೀಫ್, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ. ಜಯಂತ ಕುಮಾರ, ಹಿರಿಯ ಸಿವಿಲ್ ನ್ಯಾಯಾಧೀಶ ನೂರುನ್ನೀಸಾ, ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ನಾಹಿದಾ ಜ಼ಮ್ ಜ಼ಮ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಗೋಪಾಲ್ ಹಾಗೂ ಎಂ.ಎಲ್.ಪುರುಷೋತ್ತಮ್, ತಹಶೀಲ್ದಾರ್ ರಾಜೇಶ್ವರಿ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular