Thursday, January 29, 2026
Google search engine
Homeಮುಖಪುಟಮತಗಳ್ಳತನ-ಪ್ರಧಾನಿ ಮೋದಿ ರಾಜಿನಾಮೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಮತಗಳ್ಳತನ-ಪ್ರಧಾನಿ ಮೋದಿ ರಾಜಿನಾಮೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮ ಮತ್ತು ಮತಗಳ್ಳತನ ವಿರೋಧಿಸಿ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ. ಮತಗಳ್ಳತನದ ವಿರುದ್ಧ ಕರ್ನಾಟಕ ರಾಜ್ಯದಿಂದ ಆರಂಭವಾಗಿರುವ ಪ್ರತಿಭಟನಾ ಅಭಿಯಾನ ಇಡೀ ದೇಶಾದ್ಯಂತ ವ್ಯಾಪಿಸಲಿದೆ. ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ಅಧ್ಯಯನ ಮಾಡಿ, ಮತದಾನದ ಅಂಕಿ ಅಂಶಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡಿ ದಾಖಲೆಗಳ ಸಮೇತ ದೇಶದ ಜನರ ಮುಂದೆ ಇಟ್ಟಿದ್ದಾರೆ ಎಂದು ಹೇಳಿದರು.

ಚುನಾವಣಾ ಆಯೋಗ ಸಂವಿಧಾನದ ಅಡಿಯಲ್ಲಿ ನ್ಯಾಯಬದ್ದವಾಗಿ ನಡೆದುಕೊಳ್ಳಬೇಕು. ಸಂವಿಧಾನ ಕೊಟ್ಟಿರುವ ಮತದಾನದ ಮೂಲಭೂತ ಹಕ್ಕನ್ನು ಯಾರೂ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಅದಕ್ಕೆ ದೇಶದ ಜನತೆ ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದರು.

ಮನುವಾದಿಗಳು ಸಂವಿಧಾನ ವಿರೋಧಿಗಳು. ಇವರು ಸಂವಿಧಾನದ ಪ್ರಕ್ರಿಯೆಯನ್ನೇ ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ವಂಚನೆ ಕಾರಣದಿಂದ ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋತಿದೆಯೇ ಹೊರತು ಜನಾಭಿಪ್ರಾಯ ಕಾಂಗ್ರೆಸ್ ಪರವಾಗಿಯೇ ಇತ್ತು ಎನ್ನುವುದು ಈಗ ಗೊತ್ತಾಗಿದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 14 ಸೀಟುಗಳನ್ನು ಗೆಲ್ಲಬೇಕಿತ್ತು. ಆದರೆ ಮತಗಳ್ಳತನದ ಕಾರಣದಿಂದ ನಾವು ಸೋತಿದ್ದೇವೆ. ಇವಿಎಂ ಬಂದ ಮೇಲೆ ಇವನ್ನು ದುರುಪಯೋಗ ಮಾಡಿಕೊಳ್ಳುವ ಕೆಲಸ ಆಗುತ್ತಿರುವುದು ಈಗ ದಾಖಲೆ ಸಮೇತ ಸಿಕ್ಕಿಬಿದ್ದಿದ್ದಾರೆ ಎಂದು ಹೇಳಿದರು.

ರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ. ಇದಕ್ಕೆ ಇಡೀ ರಾಜ್ಯದ ಜನತೆ ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಹೆಚ್.ಕೆ.ಪಾಟೀಲ, ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಡಾ. ಹೆಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಎಂ.ಬಿ.ಪಾಟೀಲ್, ಬೈರತಿ ಸುರೇಶ್ ಹಾಗೂ ಪಕ್ಷದ ವಿವಿಧ ಪದಾಧಿಕಾರಿಗಳು ಮತ್ತು ಮುಖಂಡರುಗಳು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular