ತಮಿಳುನಾಡಿನ ಕರೂರಿನಲ್ಲಿ ನಡೆದ ಟಿವಕೆ ಪಕ್ಷದ ಕಾರ್ಯಕ್ರಮದಲ್ಲಿ ಕಾಲ್ತುಳಿತ ಸಂಭವಿಸಿ ಈವರೆಗೆ 40 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಕಾಲ್ತುಳಿದಲ್ಲಿ ಮೃತಪಟ್ಟ ಎಲ್ಲಾ ಕುಟುಂಬಗಳಿಗೆ ತಲಾ 20 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಶನಿವಾರ ತಮಿಳುನಾಡಿನ ಕರೂರಿನಲ್ಲಿ ಟಿವಿಕೆ ಪಕ್ಷದ ಸಮಾವೇಶ ನಡೆಯಿತು. ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ 10 ಮಂದಿ ಮಕ್ಕಳು, 17 ಮಂದಿ ಮಹಿಳೆಯರು ಸೇರಿದಂತೆ ಇದುವರೆಗೆ ಒಟ್ಟು 40 ಮಂದಿ ಮೃತಪಟ್ಟಿದ್ದಾರೆ. ಇದರಿಂದ ಆಘಾತಗೊಂಡಿರುವ ನಟ ಕಮ್ ರಾಜಕಾರಣಿ ವಿಜಯ್ ಟ್ವೀಟ್ ಮಾಡಿ ಮೃತರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ನೀಡುವುದಾಗಿ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ.

ಕಾಲ್ತುಳಿತ ಸಾವು ಪ್ರಕರಣವನ್ನು ತಮಿಳುನಾಡು ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅರುಣ ಜಗದೀಶನ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮೃತರ ಕುಟುಂಬಗಳ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.
ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರತಿಯೊಬ್ಬರಿಗೂ ತಲಾ 1 ಲಕ್ಷ ರೂಪಾಯಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.
ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಕಾಲ್ತುಳಿತದಲ್ಲಿ ಮೃತರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಪ್ರತಿಯೊಂದು ಮೃತ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಕಾಲ್ತುಳಿದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ 50 ಸಾವಿರ ರೂಪಾಯಿ ನೀಡುವುದಾಗಿ ಹೇಳಿದ್ದಾರೆ.


