ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರ್ಕಾರಕ್ಕೆ ಎರಡುವರೆ ವರ್ಷ ಅವಧಿ ಪೂರ್ಣಗೊಳ್ಳುತ್ತಿರುವ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲು ತೀರ್ಮಾನಿಸಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯ ಸಂಪುಟದಲ್ಲಿ ಮಹತ್ವದ ಬದಲಾವಣೆಗಳಾಗಲಿವೆ.
ವಿದೇಶ ಪ್ರವಾಸದಲ್ಲಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸ್ವದೇಶಕ್ಕೆ ಹಿಂತಿರುಗುತ್ತಿದ್ದಂತೆ ಸಂಪುಟ ಪುನಾರಚನೆ ಕುರಿತಂತೆ ಚರ್ಚೆ ನಡೆಸಲಿದ್ದು, ಅಕ್ಟೋಬರ್ ಎರಡನೇ ವಾರದಲ್ಲಿ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯಲಿದೆ.
ಈ ಬಾರಿ ಸಂಪುಟ ಪುನಾರಚನೆ ಸಮಯದಲ್ಲಿ ಪ್ರಾದೇಶಿಕ ಅಸಮತೋಲನ ಮತ್ತು ಸಾಮಾಜಿಕ ನ್ಯಾಯ ದೃಷ್ಟಿ ಇಟ್ಟುಕೊಂಡು ಅನುಭವ ಮತ್ತು ಅರ್ಹತೆಯನ್ನು ಮಾನದಂಡವಾಗಿರಿಸಿಕೊಳ್ಳಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಬೀದರ್ ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ಪೌರಾಡಳಿತ ಮಂತ್ರಿ ರಹೀಮ್ ಖಾನ್, ಚಿತ್ರದುರ್ಗದ ಡಿ ಸುಧಾಕರ್ ಶಿವಮೊಗ್ಗದ ಮಧು ಬಂಗಾರಪ್ಪ, ವಿಜಯಪುರದ ಶಿವಾನಂದ ಪಾಟೀಲ್ ಸೇರಿದಂತೆ ಕೆಲವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇವರ ಜೊತೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಮಾಜ ಕಲ್ಯಾಣ ಮಂತ್ರಿ ಎಚ್.ಸಿ. ಮಹಾದೇವಪ್ಪ ಅವರಿಗೂ ಸಂಪುಟದಿಂದ ಕೊಕ್ ನೀಡುವ ಸಾಧ್ಯತೆ ಇದೆ. ಸುಮಾರು 8 ರಿಂದ 10 ಮಂದಿ ಹಾಲಿ ಮಂತ್ರಿಗಳನ್ನು ಕೈಬಿಟ್ಟು ಅವರ ಸ್ಥಾನಕ್ಕೆ ಯುವಕರು ಮತ್ತು ಅನುಭವಿಗಳನ್ನು ಸೇರ್ಪಡೆ ಮಾಡಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನಿಸಿದ್ದು ಸಂಭಾವ್ಯರ ಪಟ್ಟಿ ಸಿದ್ಧಪಡಿಸಿದ್ದಾರೆ. ಈ ಕುರಿತಂತೆ ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸಿದ ನಂತರ ಪ್ರಕ್ರಿಯೆ ಆರಂಭಿಸಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ವಿಧಾನ ಪರಿಷತ್ ಸಭಾ ನಾಯಕರಾಗಿರುವ ಬೋಸರಾಜು ಅವರನ್ನು ಮಂತ್ರಿ ಸ್ಥಾನದಿಂದ ಕೈಬಿಟ್ಟು ಪರಿಷತ್ ಸಭಾಪತಿಯಾಗಿ ನೇಮಿಸಲು ಚರ್ಚೆ ನಡೆದಿದೆ ಇವರಿಂದ ತೆರವಾಗುವ ಸ್ಥಾನಕ್ಕೆ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಅವರನ್ನು ನೇಮಿಸಿ ಮೇಲ್ಮನೆಯ ಸಭಾ ನಾಯಕರನ್ನಾಗಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ಸುಕರಾಗಿದ್ದಾರೆ ಎಂದು ಗೊತ್ತಾಗಿದೆ.
ಹಿರಿಯ ನಾಯಕ ಆರ್ ವಿ ದೇಶಪಾಂಡೆ, ತನ್ವೀರ್ ಸೇಠ್ ನರೇಂದ್ರಸ್ವಾಮಿ, ರಘುಮೂರ್ತಿ, ಅಪ್ಪಾಜಿ ನಾಡಗೌಡ ಮಂತ್ರಿ ಆಗುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.


