ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆಯ ವಿಚಾರ ರಾಜ್ಯ ಕಾಂಗ್ರೆಸ್ಸಿನಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಗೃಹ ಸಚಿವ ಪರಮೇಶ್ವರ್ ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ನಾನು ಕೂಡ ಇದ್ದೇನೆ ಎಂದು ಹೇಳಿದ್ದಾರೆ.
ಮತ್ತೊಂದೆಡೆ ಶಾಸಕರ ಬೆಂಬಲ ಇಲ್ಲದೆ ಯಾರೂ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ. ಜೊತೆಗೆ ಹೈಕಮಾಂಡ್ ಆಶೀರ್ವಾದ ಕೂಡ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದು ತೀವ್ರ ಕುತೂಹಲ ಮೂಡಿಸಿದೆ.
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನವೆಂಬರ್ ನಲ್ಲಿ ಎರಡುವರೆ ವರ್ಷಗಳ ಅಧಿಕಾರ ಅವಧಿ ಪೂರ್ಣಗೊಳಿಸುತ್ತಿದ್ದು ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನರ್ ರಚನೆ ವಿಚಾರ ಕುತೂಹಲ ಮೂಡಿಸಿದೆ.
ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹಮಂತ್ರಿ ಡಾ. ಜಿ ಪರಮೇಶ್ವರ್ ತಾವು ಕೂಡ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ. ಆದರೆ, ಮುಖ್ಯಮಂತ್ರಿ ಹುದ್ದೆ ರೇಸಿನಲ್ಲಿ ನಾನು ಎರಡನೇ ಸ್ಥಾನದಲ್ಲಿದ್ದೇನೆ ಎಂದು ಹೇಳಿದರು.
ನಾನೇಕೆ ಮುಖ್ಯಮಂತ್ರಿಯಾಗಬಾರದು ಎಂದು ಸಹಜವಾಗಿ ಕೇಳಿದ್ದೇನೆ. ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿಯಾಗಲು ಬಹಳಷ್ಟು ಮಂದಿ ಆಕಾಂಕ್ಷಿಗಳು ಇದ್ದಾರೆ ಎಂದು ಹೇಳಿದರು.
ಸದ್ಯಕ್ಕೆ ಮುಖ್ಯಮಂತ್ರಿಯ ಹುದ್ದೆಯ ಸ್ಪರ್ಧೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮೊದಲ ಸ್ಥಾನದಲ್ಲಿದ್ದಾರೆ, ನಂತರದಲ್ಲಿ ನಾವು ಎರಡನೇ ಸ್ಥಾನದಲ್ಲಿದ್ದೇವೆ. ಇಷ್ಟಾಗಿಯೂ ಹೈಕಮಾಂಡ್ ಯಾರನ್ನೇ ಮುಖ್ಯಮಂತ್ರಿ ಮಾಡಿದ್ದರೂ ನಾವೆಲ್ಲಾ ಅವರಿಗೆ ಜೈ ಎನ್ನುತ್ತೇವೆ ಎಂದು ತಿಳಿಸಿದರು.
ಒಂದು ವೇಳೆ ಶಾಸಕರ ಅಭಿಪ್ರಾಯ ಪಡೆಯುವುದಿಲ್ಲ, ನೇರವಾಗಿ ಮುಖ್ಯಮಂತ್ರಿ ಮಾಡುತ್ತೇವೆ ಎಂದರೆ ಹೈಕಮಾಂಡ್‍ನ ತೀರ್ಮಾನಕ್ಕೆ ನಾವು ಬದ್ದರಾಗಿರುತ್ತೇವೆ. ಯಾರನ್ನೇ ಮುಖ್ಯಮಂತ್ರಿ ಮಾಡಿದರೂ ಒಪ್ಪಿಕೊಳ್ಳುತ್ತೇವೆ ಎಂದು ಎಂದು ಸ್ಪಷ್ಟಪಡಿಸಿದರು.


