Thursday, November 6, 2025
Google search engine
Homeಮುಖಪುಟನವೆಂಬರ್ 7ರಂದು ತುಮಕೂರಿನಲ್ಲಿ ಕ್ಯಾನ್ಸರ್ ಆಸ್ಪತ್ರೆಗೆ ಚಾಲನೆ-ಸಚಿವ ಶರಣಪ್ರಕಾಶ್ ಪಾಟೀಲ್

ನವೆಂಬರ್ 7ರಂದು ತುಮಕೂರಿನಲ್ಲಿ ಕ್ಯಾನ್ಸರ್ ಆಸ್ಪತ್ರೆಗೆ ಚಾಲನೆ-ಸಚಿವ ಶರಣಪ್ರಕಾಶ್ ಪಾಟೀಲ್

ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ತುಮಕೂರು ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಕ್ಯಾನ್ಸರ್ ಆಸ್ಪತೆ ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶರಣಪ್ರಕಾಶ್ ಪಾಟೀಲ್, ಸುಮಾರು 69.96 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಿರುವ 100 ಹಾಸಿಗೆಗಳುಳ್ಳ ಈ ನೂತನ ಕ್ಯಾನ್ಸರ್ ಆಸ್ಪತ್ರೆಯ ಕಟ್ಟಡದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನವೆಂಬರ್ 7ರಂದು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ತಿಳಿಸಿದರು.

ಕ್ಯಾನ್ಸರ್ ಆಸ್ಪತ್ರೆಯನ್ನು ರೋಗಿಗಳ ಚಿಕಿತ್ಸೆಗೆ ಕಾರ್ಯಾಚರಣೆಗೊಳಿಸಲು ಪ್ರಥಮ ಹಂತದಲ್ಲಿ ಸುಮಾರು 41 ಕೋಟಿ ರೂ. ವೆಚ್ಚದಲ್ಲಿ ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗುವುದು. ಉಪಕರಣಗಳ ಅಳವಡಿಕೆಗೆ ನಾಲ್ಕೈದು ತಿಂಗಳು ಸಮಯ ಬೇಕಾಗಬಹುದು. ಉಪಕರಣ ಖರೀದಿಗಾಗಿ ಟೆಂಡರ್ ಕರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪ್ರತೀ ದಿನ ಸುಮಾರು 20 ರಿಂದ 30 ಕ್ಯಾನ್ಸರ್ ರೋಗಿಗಳು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ಭೇಟಿ ನೀಡುತ್ತಿದ್ದು, ಈ ರೋಗಿಗಳಿಗೆ ಕಿಮೋಥೆರಪಿ, ರೇಡಿಯೋ ಥೆರಪಿ ಹಾಗೂ ಆಂಕೊ ಸರ್ಜರಿ ಚಿಕಿತ್ಸೆಗಾಗಿ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಪ್ರತೀ ದಿನ ರಾಜ್ಯವಲ್ಲದೆ ಇತರೆ ರಾಜ್ಯದ ಕ್ಯಾನ್ಸರ್ ರೋಗಿಗಳೂ ಚಿಕಿತ್ಸೆಗೆ ಬರುತ್ತಿರುವುದರಿಂದ ಕಿದ್ವಾಯಿ ಆಸ್ಪತ್ರೆಯ ಒತ್ತಡ ಕಡಿಮೆ ಮಾಡಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸಲಾಗುವುದು ಎಂದು ತಿಳಿಸಿದರು.

ಕ್ಯಾನ್ಸರ್ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ಪ್ರತೀ ಜಿಲ್ಲೆಯಲ್ಲಿಯೂ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಕಲ್ಬುರ್ಗಿಯಲ್ಲಿ ಈಗಾಗಲೇ ನಿರ್ಮಿಸಿರುವ 100 ಹಾಸಿಗೆಗಳುಳ್ಳ ಕ್ಯಾನ್ಸರ್ ಆಸ್ಪತ್ರೆ ಕಾರ್ಯ ನಿರ್ವಹಿಸುತ್ತಿದೆ. ಬಳ್ಳಾರಿ, ಬೀದರ್, ರಾಯಚೂರಿಗೂ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ದೊರೆತಿದೆ. ಶಿವಮೊಗ್ಗ, ಮಂಡ್ಯದಲ್ಲಿ ಕಟ್ಟಡ ಪೂರ್ಣಗೊಂಡಿದ್ದು, ಶೀಘ್ರದಲ್ಲಿ ಲೋಕಾರ್ಪಣೆಗೊಳಿಸಲಾಗುವುದು ಎಂದರು.

ಮುಖ್ಯಮಂತ್ರಿಗಳು ನವೆಂಬರ್ 7ರಂದು ತುಮಕೂರು ನಗರದಲ್ಲಿ ಕ್ಯಾನ್ಸರ್ ಆಸ್ಪತ್ರೆಯೊಂದಿಗೆ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ನರ್ಸಿಂಗ್ ಕಾಲೇಜು ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಕ್ಯಾನ್ಸರ್ ಆಸ್ಪತ್ರೆಗೆ ವೈದ್ಯಕೀಯ ಉಪಕರಣಗಳೊಂದಿಗೆ ಅಗತ್ಯ ಸಿಬ್ಬಂದಿಗಳ ನೇಮಕಕ್ಕೆ ಕ್ರಮವಹಿಸಲಾಗುವುದು ಎಂದು ಹೇಳಿದರು.

ಶಾಸಕರಾದ ಜಿ.ಬಿ. ಜ್ಯೋತಿ ಗಣೇಶ್, ಸುರೇಶ್ ಗೌಡ, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕ ಸುಜಾತ ರಾಥೋಡ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್, ಜಿಲ್ಲಾ ಶಸ್ತçಚಿಕಿತ್ಸಕ ಡಾ. ಅಸ್ಗರ್ ಬೇಗ್, ಕಿದ್ವಾಯಿ ಆಸ್ಪತ್ರೆಯ ಡಾ. ನವೀನ್, ಇಂಜಿನಿಯರ್ ಚಂದ್ರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular