ತುಮಕೂರು ಜಿಲ್ಲೆಗೆ ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಬರುವಂತೆ ಶಾಲಾ ಶಿಕ್ಷಣ ಇಲಾಖೆ ಶ್ರಮಿಸಬೇಕು. ವಿಫಲವಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರಿಕೆ ಮಾಡಲಾಗುವುದು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಶಿಕ್ಷಣ ಇಲಾಖೆಗೆ ತಾಕೀತು ಮಾಡಿದರು.
ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಬಾರಿ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಂಠಿತಗೊಂಡಿದೆ. ಮಕ್ಕಳ ಮುಂದಿನ ಭವಿಷ್ಯ ರೂಪಿಸಲು ಶೇಕಡಾ 100ರಷ್ಟು ಫಲಿತಾಂಶ ಸಾಧಿಸುವತ್ತ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ತುಮಕೂರು ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಯಾವ ವಿಷಯದಲ್ಲಿ ಹಿಂದುಳಿದಿದ್ದಾರೆ ಎಂಬುದನ್ನು ಗಮನಿಸಿ, ಅವರಿಗೆ ವಿಶೇಷ ತರಗತಿಗಳನ್ನು ನಡೆಸಬೇಕು. ಶಾಲಾ ಶಿಕ್ಷಕರಿಗೆ ಕಾರ್ಯಾಗಾರಗಳು ಹಾಗೂ ಮಾರ್ಗದರ್ಶನ ಶಿಬಿರಗಳನ್ನು ಆಯೋಜಿಸಿ, ಮುಂದಿನ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಸಾಧಿಸಲು ಪ್ರಯತ್ನಿಸಬೇಕು ಎಂದು ತುಮಕೂರು ಹಾಗೂ ಮಧುಗಿರಿ ಡಿಡಿಪಿಐಗಳಿಗೆ ಸೂಚನೆ ನೀಡಿದರು.
ನವದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರಾದ ಬಿ. ಸುರೇಶಗೌಡ, ಜಿ.ಬಿ. ಜ್ಯೋತಿಗಣೇಶ್, ಸಿ.ಬಿ. ಸುರೇಶಬಾಬು, ಎಂ.ಟಿ. ಕೃಷ್ಣಪ್ಪ, ಎಚ್.ವಿ. ವೆಂಕಟೇಶ್, ಕೆ. ಷಡಕ್ಷರಿ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ. ಗೌಡ ಹಾಗೂ ಡಿ.ಟಿ. ಶ್ರೀನಿವಾಸ್, ಡಿಸಿ ಶುಭ ಕಲ್ಯಾಣ್, ಎಸ್‌ಪಿ ಅಶೋಕ್ ಕೆ.ವಿ., ಜಿ.ಪಂ. ಸಿಇಒ ಜಿ.ಪ್ರಭು, ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ ಇದ್ದರು.


