ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹೀಗಾಗಿ ಈ ಬಗ್ಗೆ ಚರ್ಚೆ ಅನಗತ್ಯ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿ ಐದು ವರ್ಷಗಳ ಅಧಿಕಾರ ಅವಧಿ ಪೂರ್ಣಗೊಳಿಸಲಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಮುಖ್ಯಮಂತ್ರಿ ವಿಚಾರದ ಕುರಿತಾಗಿ ಮಾತನಾಡಲು ನಮಗೆ ಯಾರಿಗೂ ಅಧಿಕಾರ ಇಲ್ಲ. ಈ ಬಗ್ಗೆ ಹೈಕಮಾಂಡ್ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ಆದರೆ 2028 ರವರೆಗೂ ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಅವರ ನಾಯಕತ್ವದಲ್ಲಿ ನಾವೆಲ್ಲರೂ ಮುಂದುವರೆಯುತ್ತಿದ್ದೇವೆ ಎಂದು ಹೇಳಿದರು.
ಸದ್ಯ ಉಂಟಾಗಿರುವ ಗೊಂದಲಗಳ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಕೇಳಿದ್ದೇವೆ. ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲರ ಜೊತೆ ಮಾತನಾಡುವುದಾಗಿ ಹೇಳಿದ್ದು ಹೈಕಮಾಂಡ್ ಆದಷ್ಟು ಶೀಘ್ರ ಗೊಂದಲಗಳಿಗೆ ತೆರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಧಾನಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ನಮ್ಮ ತಂದೆ ಅವರ ಮೇಲೆ ಯಾವ ಆರೋಪಗಳು ಇಲ್ಲ. ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದೆ ಆಡಳಿತ ನಡೆಸುತ್ತಿರುವ ಅವರನ್ನು ಯಾವ ಕಾರಣಕ್ಕಾಗಿ ಕೆಳಗಿಳಿಸುತ್ತಾರೆ ಎಂದು ಪ್ರಶ್ನಿಸಿದರು.
ಈಗಾಗಲೇ ನಮ್ಮ ತಂದೆ ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. ಆದರೂ ಕೂಡ ಈ ಬಗ್ಗೆ ಕೆಲವರು ಚರ್ಚೆ ಮಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಆಗಬಾರದಿತ್ತು ಎಂದರು.
ತಮಗೆ ಇರುವ ಮಾಹಿತಿಯಂತೆ ಸರ್ಕಾರ ರಚನೆ ಸಮಯದಲ್ಲಿ ಯಾವುದೇ ಅಧಿಕಾರ ಹಂಚಿಕೆ ಸೂತ್ರ ರಚನೆಯಾಗಿಲ್ಲ. ಈ ಬಗ್ಗೆ ನಮ್ಮ ತಂದೆಯವರಾಗಲಿ ಹಿರಿಯ ಮಂತ್ರಿಗಳಾಗಲಿ ಯಾರೂ ಮಾತನಾಡಿಲ್ಲ. ಹಾಗಿದ್ದರೂ ಕೂಡ ಅಧಿಕಾರ ಹಂಚಿಕೆ ಸೂತ್ರದ ಕುರಿತು ಚರ್ಚೆ ನಡೆಯುತ್ತಿದೆ ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಬೇಸರ ವ್ಯಕ್ತಪಡಿಸಿದರು.


