ಆರ್ಥಿಕ ಸಂಕಷ್ಟದಲ್ಲಿರುವ ರೈತರ ಮಕ್ಕಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ವಿದ್ಯಾನಿಧಿ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ವಿದ್ಯಾನಿಧಿ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳ ಖಾತೆಗೆ ನೇರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ 17 ಲಕ್ಷ ರೈತ ಕುಟುಂಬಗಳಿವೆ. ಆ ಕುಟುಂಬಗಳನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಇಂತಹ ಯೋಜನೆ ಅನುಷ್ಠಾನಗೊಳಿಸಲಾಗಿದೆ. ರೈತ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ದೃಷ್ಟಿಯಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದರು.
ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರೈತರ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗಬಾರದು. ಹಾಗಾಗಿ ವಿದ್ಯಾನಿಧಿ ಯೋಜನೆಯನ್ನು ತ್ವರಿತವಾಗಿ ರೂಪಿಸಿ ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ಪಿಯುಸಿ, ಐಟಿಐ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ 2500 ರೂ, ವಿದ್ಯಾರ್ಥಿನಿಯರಿಗೆ 3000 ರೂ, ಪದವೀಧರರಿಗೆ 5 ಸಾವಿರ ರೂ, ವಿದ್ಯಾರ್ಥಿನಿಯರಿಗೆ 5,500 ರೂ, ಎಲ್ಎಲ್.ಬಿ, ಪ್ಯಾರಾಮೆಡಿಕಲ್, ಬಿ ಫಾರ್ಮಾ, ನರ್ಸಿಂಗ್, ವೃತ್ತಿಪರ ಕೋರ್ಸ್ ಗಳಿಗೆ 7500 ರೂ, ವಿದ್ಯಾರ್ಥಿನಿಯರಿಗೆ 8 ಸಾವಿರ ನೀಡಲಾಗುವುದು ಎಂದು ತಿಳಿಸಿದರು.