Sunday, October 25, 2026
Google search engine
Homeಮುಖಪುಟಉಮ್ರಾ ಯಾತ್ರಿಕರ ಸುರಕ್ಷಿತ ವಾಪಸಾತಿಗೆ ತಾಜುದ್ದೀನ್ ಶರೀಫ್ ಆಗ್ರಹ

ಉಮ್ರಾ ಯಾತ್ರಿಕರ ಸುರಕ್ಷಿತ ವಾಪಸಾತಿಗೆ ತಾಜುದ್ದೀನ್ ಶರೀಫ್ ಆಗ್ರಹ

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಸೌದಿ ಅರೇಬಿಯಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ತುಮಕೂರು ಜಿಲ್ಲೆಯ ಉಮ್ರಾ ಯಾತ್ರಿಕರ ಸುರಕ್ಷತೆ ಹಾಗೂ ತಾಯ್ನಾಡಿಗೆ ಸುರಕ್ಷಿತವಾಗಿ ವಾಪಸಾಗುವುದನ್ನು ಖಚಿತಪಡಿಸಲು ಕರ್ನಾಟಕ ಸರಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ತುಮಕೂರು ಜಿಲ್ಲಾಧ್ಯಕ್ಷ ತಾಜುದ್ದೀನ್ ಶರೀಫ್ ಆಗ್ರಹಿಸಿದ್ದಾರೆ.

ವಿಮಾನಗಳ ರದ್ದತಿ ಹಾಗೂ ಪ್ರಯಾಣದ ಅನಿಶ್ಚಿತತೆಯಿಂದ ಯಾತ್ರಿಕರು ತೀವ್ರ ಆತಂಕ ಮತ್ತು ತೊಂದರೆ ಅನುಭವಿಸುತ್ತಿದ್ದಾರೆ. ವಿಶೇಷವಾಗಿ ಮಹಿಳೆಯರು, ಮಕ್ಕಳು, ವೃದ್ಧರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ಯಾತ್ರಿಕರ ಪರಿಸ್ಥಿತಿಯ ಬಗ್ಗೆ ಸರಕಾರ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯ ಸರಕಾರವು ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಸೌದಿ ಅರೇಬಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಹಾಗೂ ಸಂಬಂಧಿತ ವಿಮಾನಯಾನ ಸಂಸ್ಥೆಗಳೊಂದಿಗೆ ತುರ್ತು ಸಮನ್ವಯ ಸಾಧಿಸಬೇಕು ಎಂದು ಹೇಳಿದ್ದಾರೆ.

ಸಂಕಷ್ಟದಲ್ಲಿರುವ ಯಾತ್ರಿಕರ ನಿಖರ ಮಾಹಿತಿಯನ್ನು ಸಂಗ್ರಹಿಸಿ, ಅವರಿಗೆ ಸುರಕ್ಷಿತ ವಸತಿ, ಆಹಾರ, ವೈದ್ಯಕೀಯ ನೆರವು ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಜೊತೆಗೆ, ವಿಶೇಷ ವಿಮಾನಗಳ ವ್ಯವಸ್ಥೆ ಸೇರಿದಂತೆ ಪರ್ಯಾಯ ಪ್ರಯಾಣ ಮತ್ತು ವಾಪಸಾತಿ ಕ್ರಮಗಳನ್ನು ಪರಿಶೀಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸಂಕಷ್ಟದಲ್ಲಿರುವ ಯಾತ್ರಿಕರು ಹಾಗೂ ಅವರ ಕುಟುಂಬಗಳಿಗೆ ವಿಶ್ವಾಸಾರ್ಹ ಮತ್ತು ನಿರಂತರ ಮಾಹಿತಿ ಒದಗಿಸಲು ರಾಜ್ಯ ಸರಕಾರ ತುರ್ತು ಸಹಾಯವಾಣಿ ಆರಂಭಿಸಬೇಕು ಹಾಗೂ ಈ ಕಾರ್ಯದ ಮೇಲ್ವಿಚಾರಣೆಗಾಗಿ ನೋಡಲ್ ಅಧಿಕಾರಿಯನ್ನು ನೇಮಿಸಬೇಕು. ಯಾತ್ರಿಕರು ಸುರಕ್ಷಿತವಾಗಿ ಕರ್ನಾಟಕಕ್ಕೆ ಮರಳುವವರೆಗೆ ಸರಕಾರವು ನಿರಂತರ ನಿಗಾ ವಹಿಸಿ, ಅಗತ್ಯ ನೆರವು ಒದಗಿಸಬೇಕು ಎಂದು ಅವರು ತಿಳಿಸಿದ್ದಾರೆ.

ಮಾನವೀಯ ದೃಷ್ಟಿಕೋನದಿಂದ ಈ ಬಿಕ್ಕಟ್ಟನ್ನು ಗಂಭೀರವಾಗಿ ಪರಿಗಣಿಸಿ, ಸೌದಿ ಅರೇಬಿಯಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ತುಮಕೂರು ಜಿಲ್ಲೆಯ ಉಮ್ರಾ ಯಾತ್ರಿಕರ ಸುರಕ್ಷತೆ ಮತ್ತು ತಾಯ್ನಾಡಿಗೆ ತ್ವರಿತ ವಾಪಸಾತಿಯನ್ನು ಖಚಿತಪಡಿಸಲು ಮುಖ್ಯಮಂತ್ರಿ ತಕ್ಷಣ ಮಧ್ಯಪ್ರವೇಶಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಜುದ್ದೀನ್ ಶರೀಫ್ ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular