ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಸ್ಟಿಂಗ್ ಆಪರೇಷನ್ ಮಾಡಿರುವುದು ವಿಧಾನ ಪರಿಷತ್ ಚುನಾವಣೆಯ ಮೇಲೆ ಪರಿಣಾಮ ಬೀರಿದ್ದು, ಕಾಂಗ್ರೆಸ್ ಅಭ್ಯರ್ಥಿಗಳು ಸೋಲಲು ಕಾರಣ ಎಂದು ಮಾಜಿ ಸಚಿವ ಹಾಗೂ ಮಧುಗಿರಿಯ ಹಾಲಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆ.ಎನ್.ರಾಜಣ್ಣ, ಸ್ಟಿಂಗ್ ನಡೆಸಿರುವುದು ಪರಿಷತ್ ಚುನಾವಣೆಯ ಮೇಲೆ ಗಂಭೀರ ಪರಿಣಾಮ ಬೀರಿದೆ. ಹೀಗಾಗಿಯೇ ಕಾಂಗ್ರೆಸ್ ಸೋಲಿಗೆ ಕಾರಣವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದ್ದಾರೆ.
ಆಗ್ನೇಯ ಪದವೀಧರರ ವಿಧಾನ ಪರಿಷತ್ ಕ್ಷೇತ್ರ ವ್ಯಾಪ್ತಿಯಲ್ಲಿ 35 ಜನ ಶಾಸಕರಿದ್ದಾರೆ. ಅವರ ಪೈಕಿ 26 ಶಾಸಕರು ಕಾಂಗ್ರೆಸ್ ಪಕ್ಷದವರೇ ಇದ್ದಾರೆ. ಆದರೂ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಲಾಗಿಲ್ಲ. ಹೀಗಾಗಿ ನೈತಿಕ ಹೊಣೆ ಹೊತ್ತು ನನ್ನನ್ನೂ ಸೇರಿಕೊಂಡಂತೆ ಎಲ್ಲ 26 ಕಾಂಗ್ರೆಸ್ ಶಾಸಕರು ರಾಜಿನಾಮೆ ನೀಡಬೇಕು ಎಂದು ಹೇಳಿದ್ದಾರೆ.
ಸ್ಟಿಂಗ್ ಆಪರೇಷನ್ ಮಾಡಿರುವುದು ಪದವೀಧರ ಮತ್ತು ಶಿಕ್ಷಕ ಮತದಾರರ ಮೇಲೆ ಗಂಭೀರ ಪರಿಣಾಮ ಬೀರಿದೆ. ಹೀಗಾಗಿಯೇ ಕಾಂಗ್ರೆಸ್ ಅಭ್ಯರ್ಥಿ ಸೋಲನುಭವಿಸಲು ಕಾರಣವಾಗಿದೆ. ಸ್ಟಿಂಗ್ ಆಪರೇಷನ್ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.


