ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಮಕ್ಕಳು ಮತ್ತು ಅಪಾರ ಬೆಂಬಲಿಗರನ್ನು ಅಗಲಿದ್ದಾರೆ.
ದೈಹಿಕ ಕಸರತ್ತು ನಡೆಸುತ್ತಿದ್ದ ಸಂದರ್ಭದಲ್ಲಿ ಜುಲೈ 19ರಂದು ಬಿದ್ದಿದ್ದರು. ಹಾಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಬಿದ್ದ ಸಂದರ್ಭದಲ್ಲಿ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು ಎಂಬ ಅಂಶ ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಆಸ್ಕರ್ ಡೈಯಲಿಸಿಸ್ ಗೂ ಒಳಗಾಗಿದ್ದರು ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಆಸ್ಕರ್ ಫರ್ನಾಂಡಿಸ್ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವರಾಗಿದ್ದರು. ಜೊತೆಗೆ ಕಾರ್ಮಿಕ ಮತ್ತು ಉದ್ಯೋಗ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿತ್ತು.
ಆಸ್ಕರ್ ಕೇಂದ್ರ ಸಚಿವರಾಗಿದ್ದ ವೇಳೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಸೋನಿಯ ಗಾಂಧಿ ಆಪ್ತವಲಯದಲ್ಲಿ ಆಸ್ಕರ್ ಫರ್ನಾಂಡಿಸ್ ಕೂಡ ಒಬ್ಬರಾಗಿದ್ದರು.
ರಾಜ್ಯದಲ್ಲಿ 1980ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿಯೂ ಫರ್ನಾಂಡಿಸ್ ಕೆಲಸ ಮಾಡಿದ್ದಾರೆ. ನಂತರ ಯುಪಿಎ ಸರ್ಕಾರದ ಅವಧಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿಯೂ ಕೆಲಸ ನಿರ್ವಹಿಸಿದರು. 1983 ರಿಂದ 1997ರವರೆಗೆ ಐದು ಬಾರಿ ಲೋಕಸಭಾ ಸದಸ್ಯರಾಗಿಯೂ ಮತ್ತು 1998ರಲ್ಲಿ ರಾಜ್ಯಸಭೆ ಸದಸ್ಯರಾಗಿ ಕೆಲಸ ಮಾಡಿದ್ದರು.
ಮಾರ್ಚ್ 27, 1941ರಲ್ಲಿ ಉಡುಪಿ ಜಿಲ್ಲೆಯಲ್ಲಿ ಜನಿಸಿದ್ದ ಆಸ್ಕರ್ ಫರ್ನಾಂಡಿಸ್ ಅವರು ರೂಕ್ ಮತ್ತು ಲಿಯೋನಿಸ್ಸಾ ದಂಪತಿಯ 12 ಮಕ್ಕಳಲ್ಲಿ ಒಬ್ಬರಾಗಿದ್ದರು. ಬ್ಲೂಸೊಬ್ ಅವರೊಂದಿಗೆ ವಿವಾಹವಾಗಿತ್ತು.
ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಕೇಂದ್ರ ಸಚಿವರು, ಕಾಂಗ್ರೆಸ್ ಹಿರಿಯ ಮುಖಂಡರಾದ ಶ್ರೀ ಆಸ್ಕರ್ ಪರ್ನಾಂಡಿಸ್ ರವರು ನಿಧನರಾದ ಸುದ್ದಿ ತಿಳಿದು ತೀವ್ರ ಬೇಸರವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬದವರು ಹಾಗೂ ನಾಡಿನಾದ್ಯಂತ ಇರುವ ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.


