ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚ್ ದೇಶಾದ್ಯಂತ ಹಮ್ಮಿಕೊಂಡಿರುವ ಪ್ರತಿಭಟನೆಗೆ 12 ಪ್ರಮುಖ ವಿರೋಧ ಪಕ್ಷಗಳು ಬೆಂಬಲ ವ್ಯಕ್ತಪಡಿಸಿವೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಜಾತ್ಯತೀತ ಜನತಾ ದಳದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ(NCP) ಮುಖ್ಯಸ್ಥ ಶರದ್ ಪವಾರ್, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಪ್ರತಿಭಟನಾ ಬೆಂಬಲ ಪತ್ರಕ್ಕೆ ಸಹಿ ಹಾಕಿದ್ದಾರೆ.
ಅಲ್ಲದೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ, ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಬಿಹಾರದ ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ತೇಜಸ್ವಿಯಾದವ್, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಕೂಡ ದೇಶವ್ಯಾಪಿ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಕೊರೊನ ಕಾಲದಲ್ಲಿ ಅನ್ನದಾತ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ಕೇಂದ್ರ ಸರ್ಕಾರ ರೈತರ ನೆರವಿಗೆ ಬರಬೇಕು. ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ಕೂಡಲೇ ರದ್ದುಪಡಿಸಬೇಕು ಎಂದು ಪ್ರತಿಪಕ್ಷಗಳ ನಾಯಕರು ಆಗ್ರಹಿಸಿದ್ದಾರೆ.
ಡಾ.ಸ್ವಾಮಿನಾಥನ್ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಬೇಕು ಕನಿಷ್ಠ ಬೆಂಬಲ ಹೆಚ್ಚಿಸಬೇಕು. ರೈತರ ಉತ್ಪನ್ನಗಳಿಗೆ ಮಾಡಿದ ವೆಚ್ಚ ಸೇರಿ ಎರಡುಪಟ್ಟು ಬೆಲೆ ನಿಗದಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.