ಮಹಾರಾಷ್ಟ್ರದ ಅಹ್ಮದ್ ನಗರದ ಸಿವಿಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಹೊತ್ತಿಕೊಂಡು 10 ಮಂದಿ ರೋಗಿಗಳು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.
ಇಂದು ಬೆಳಗ್ಗೆ ಸುಮಾರು 11 ಗಂಟೆಗೆ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಇಡೀ ಕಟ್ಟಡಕ್ಕೆ ವ್ಯಾಪಿಸಿದ್ದು 10 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆ. ಓರ್ವ ರೋಗಿ ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಯ ಕೊವಿಡ್-19 ವಾರ್ಡಿನಲ್ಲಿ 17 ಮಂದಿ ದಾಖಲಾಗಿದ್ದರು. ಇವರಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ದುರಂತದ ಕುರಿತು ಮುಖ್ಯಮಂತ್ರಿ ಉದ್ದವ್ ಠಾಕ್ರೆ ತನಿಖೆಗೆ ಆದೇಶಿಸಿದ್ದಾರೆ ಎಂದು ಎನ್.ಡಿ.ಟಿವಿ ವರದಿ ಮಾಡಿದೆ.
ಉಳಿದ ರೋಗಿಗಳನ್ನು ಮತ್ತೊಂದು ಆಸ್ಪತ್ರೆಯಲ್ಲಿ ಕೊವಿಡ್-19 ವಾರ್ಡ್ ಗೆ ಸ್ಥಳಾಂತರಿಸಿದ್ದೇವೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಭೋಸ್ಲೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬೆಂಕಿ ದುರಂತಕ್ಕೆ ಕಾರಣಗಳು ತಿಳಿದುಬಂದಿಲ್ಲ. ಆದರೆ ಅಗ್ನಿಶಾಮಕ ಇಲಾಖೆಯ ಪ್ರಾಥಮಿಕ ತನಿಖೆಗಳಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ ಎಂದು ಡಾ.ಭೋಸ್ಲೆ ಹೇಳಿದರು.
ಆಸ್ಪತ್ರೆಯ ಕೆಳಗಿನ ಮಹಡಿಯಿಂದ ಹೊಗೆ ಹೊರಬರುತ್ತಿರುವ ದೃಶ್ಯಗಳು ಕಂಡುಬಂದಿವೆ. ಬೆಂಕಿಯಿಂದ ಗೋಡೆಗಳು ಕಪ್ಪಾಗಿವೆ. ಆಸ್ಪತ್ರೆಯನ್ನು ನವೀಕರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ.
ಐಸಿಯು ಅನ್ನು ಹೊಸದಾಗಿ ನಿರ್ಮಿಸಲಾಗಿತ್ತು. ಅದರಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಬಹಳ ಗಂಭೀರವಾದ ವಿಷಯವಾಗಿದೆ. ಹಾಗಾಗಿ ಎಲ್ಲಾ ಆಸ್ಪತ್ರೆಗಳಲ್ಲಿ ಫೈರ್ ಆಡಿಟ್ ಕೈಗೊಳ್ಳಲು ತಿಳಿಸಲಾಗಿದೆ. ಅಹ್ಮದ್ ನಗರ ಸಿವಿಲ್ ಆಸ್ಪತ್ರೆಯ ಬೆಂಕಿ ದುರಂತದ ಕುರಿತು ತನಿಖೆ ನಡೆಸಲಾಗುವುದು ಎಂದು ಸಚಿವ ನವಾಬ್ ಮಲಿಕ್ ಹೇಳಿದ್ದಾರೆ.
ಮೃತ ಕುಟುಂಬಗಳಿಗೆ ಮುಖ್ಯಮಂತ್ರಿ ಠಾಕ್ರೆ ಸಂತಾಪ ವ್ಯಕ್ತಪಡಿಸಿದ್ದು ಅವರಿಗೆ ಸಾಧ್ಯವಿರುವ ಎಲ್ಲಾ ರೀತಿಯ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಸಚಿವರು ಹೇಳಿದರು.