ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ಹೋರಾಟ ಬೆಂಬಲಿಸಿ ಹಾಗೂ ರೈತರ ಹೋರಾಟಕ್ಕೆ ಒಂದು ವರ್ಷ ತುಂಬಿರುವ ಸಂಬಂಧ ತುಮಕೂರಿನ ಕ್ಯಾತ್ಸಂದ್ರದ ಸಮೀಪವಿರುವ ಜಾಸ್ ಟೋಲ್ ಬಳಿ ನೂರಾರು ರೈತರು ಹೆದ್ದಾರಿ ಬಂದ್ ನಡೆಸಿ ರೈತ ವಿರೋಧಿ ಕಾನೂನುಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಮತ್ತು ಆರ್.ಕೆ.ಎಸ್ ನೇತೃತ್ವದಲ್ಲಿ ನೂರಾರು ರೈತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ವಿವಾದಿ ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕು. ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ವಿದ್ಯುತ್ ಮಸೂದೆಯನ್ನು ಹಿಂತೆಗೆದುಕೊಳ್ಳಬೇಕು. ಎಪಿಎಂಸಿ ಕಾಯ್ದೆ ವಾಪಸ್ ಪಡೆಯುವಂತೆ ಪ್ರತಿಭಟನಾ ಕಾರರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್, ‘ಕೃಷಿ ಕಾನೂನುಗಳನ್ನು ಇದುವರೆಗೂ ಸಂಸತ್ತಿನಲ್ಲಿ ವಾಪಸ್ ಪಡೆದುಕೊಂಡಿಲ್ಲ. ರೈತರಿಗೆ ಮಾರಣಾಂತಿಕವಾದ ವಿದ್ಯುತ್ ಖಾಸಗಿ ಮಸೂದೆಯನ್ನು ಹಿಂತೆಗೆದುಕೊಳ್ಳಬೇಕು. ಬೀಜ ಕಾಯ್ದೆ ರದ್ದುಗೊಳ್ಳಬೇಕು. ಕನಿಷ್ಠ ಬೆಂಬಲ ಬೆಲೆ ಶಾಸನಬದ್ದಗೊಳಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ದೇಶದ ಎಲ್ಲೆಡೆ ರೈತರು ಪ್ರತಿಭಟನೆಗೆ ಇಳಿದಿದ್ದಾರೆ. ಹಳ್ಳಿಯಿಂದ ದಿಲ್ಲಿಯವರೆಗೂ ಪ್ರತಿಭಟನೆಗಳು ನಡೆಯುತ್ತಿವೆ. ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗಿದೆ. ಕೇಂದ್ರ ಸರ್ಕಾರ ಅವನತಿಯ ಹಾದಿ ಹಿಡಿಯುವುದನ್ನು ಮನಗಂಡು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ನಿರ್ಧಾರ ಮಾಡಿದೆ. ಇದೊಂದು ರೈತ ವಿರೋಧಿ ಸರ್ಕಾರ. 700 ರೈತರನ್ನು ಕೊಲೆ ಮಾಡಿದ ಕೊಲೆಗಡುಕ ಸರ್ಕಾರ ಎಂದು ಆನಂದ್ ಪಟೇಲ್ ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿ ಗಡಿಗಳಲ್ಲಿ ಒಂದು ವರ್ಷದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರನ್ನು ಬೀದಿಯಲ್ಲಿ ನಿಲ್ಲುವಂತೆ ಮಾಡಿದ ಕೇಂದ್ರ ಸರ್ಕಾರ ಮಾನವೀಯತೆಯನ್ನು ಕಳೆದುಕೊಂಡಿದೆ. ಕೇಂದ್ರ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲವೆಂಬುದು ಇದರಿಂದ ಸಾಬೀತಾಗಿದೆ ಎಂದು ದೂರಿದರು.
ಸತತ ಒಂದುವರೆ ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ಬಂದ್ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಜನ, ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗುತ್ತಿದ್ದ ನೂರಾರು ರೈತರನ್ನು ಪೊಲೀಸರು ಬಂಧಿಸಿದರು. ವಾಹನದಲ್ಲೂ ರೈತ ಪರ ಘೋಷಣೆಗಳು ಮತ್ತು ಸರ್ಕಾರದ ವಿರೋಧಿ ಘೋಷಣೆಗಳು ಮೊಳಗಿದವು.


