ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಗಳನ್ನು ಹಿಂಪಡೆಯುವುದೂ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದೆಹಲಿಯಲ್ಲಿ ಸ್ಥಾನಿಕ ವೈದ್ಯರು ನಡೆಸುತ್ತಿರುವ ಪ್ರತಿಭಟನೆ ಗುರುವಾರವೂ ಮುಂದುವರೆಯಲಿದೆ.
ಮಂಗಳವಾರ ಪ್ರತಿಭಟನಾನಿರತ ವೈದ್ಯರ ನಿಯೋಗ ಮತ್ತು ಕೇಂದ್ರ ಆರೋಗ್ಯ ಸಚಿವರ ನಡುವಿನ ಸಭೆಯಲ್ಲಿ ಯಾವುದೇ ಪ್ರಮುಖ ತೀರ್ಮಾನ ಕೈಗೊಳ್ಳಲು ವಿಫಲವಾಯಿತು. ಹೀಗಾಗಿ ಎನ್ಇಇಟಿ-ಪಿಜಿ ಕೌನ್ಸೆಲಿಂಗ್ ವಿಳಂಬ ವಿರೋಧಿಸಿ ಸ್ಥಾನಿಕ ವೈದ್ಯರು 13 ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ.
ರಾಷ್ಟ್ರವ್ಯಾಪಿ ಪ್ರತಿಭಟನೆಯ ನೇತೃತ್ವ ವಹಿಸಿರುವ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಪ್ರತಿಭಟನಾನಿರತ ಸ್ಥಾನಿಕ ವೈದ್ಯರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇದನ್ನು ವಾಪಸ್ ಪಡೆಯುವಂತೆ ಹೇಳಿಕೆಯಲ್ಲಿ ಆಗ್ರಹಿಸಿದೆ.
ಬೇಡಿಕೆಗಳನ್ನು ಈಡೇರಿಸುವವರೆಗೂ ಧರಣಿ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ವೈದ್ಯರ ಸಂಘ ತಿಳಿಸಿದೆ.
ಜನವರಿ 6 ರಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದ್ದು ಅಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವರು ಹೇಳಿದ್ದು, ಶೀಘ್ರವೇ ಕೌನ್ಸೆಲಿಂಗ್ ದಿನಾಂಕಗಳನ್ನು ಘೋಷಿಸುವ ಭರವಸೆ ಇದೆ ಎಂದು ಮೂಲಗಳು ತಿಳಿಸಿವೆ.
ಆದರೆ ಸ್ಥಾನಿಕ ವೈದ್ಯರ ಸಂಘದ ಪ್ರತಿನಿಧಿಗಳು ಎಫ್‌ಐಆರ್‌ಗಳನ್ನು ದೆಹಲಿ ಪೊಲೀಸರು ಹಿಂಪಡೆಯುವವರೆಗೆ ಪ್ರತಿಭಟನೆ ಮುಂದುವರೆಸಲು ನಿರ್ಧರಿಸಿದ್ದಾರೆ.
ನಮ್ಮ ಎಲ್ಲ ಬೇಡಿಕೆಗಳು ಈಡೇರುವವರೆಗೆ ಪ್ರತಿಭಟನೆ ಮುಂದುವರಿಸಲು ನಾವೆಲ್ಲರೂ ಒಪ್ಪಿಕೊಂಡಿದ್ದೇವೆ ಎಂದು ಹೇಳಿದ್ದಾರೆ.