ವೈಷ್ಣೋ ದೇವಿ ದೇಗುಲದಲ್ಲಿ ಕಾಲ್ತುಳಿತದಿಂದ ಮೃತಪಟ್ಟ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ.
ಅಧಿಕಾರಿಗಳ ಪ್ರಕಾರ, ತ್ರಿಕೂಟ ಬೆಟ್ಟಗಳ ಮೇಲಿರುವ ದೇಗುಲದ ಗರ್ಭಗುಡಿಯ ಹೊರಗಿನ ಗೇಟ್ ಸಂಖ್ಯೆ 3ರ ಬಳಿ ಶನಿವಾರ ಮುಂಜಾನೆ ನೂಕುನುಗ್ಗಲಿನಿಂದ ಈ ದುರಂತ ಸಂಭವಿಸಿದೆ.
ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಕಚೇರಿ ಟ್ವೀಟ್ ಮಾಡಿ ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣಹಾನಿಯಿಂದ ತೀವ್ರ ನೋವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪ ಮತ್ತು ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥನೆ ಎಂದಿದೆ.
ಇಂದಿನ ಕಾಲ್ತುಳಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ತನಿಖಾ ಸಮಿತಿಯು ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಎಡಿಜಿಪಿ, ಜಮ್ಮು ಮತ್ತು ವಿಭಾಗೀಯ ಆಯುಕ್ತರು ಸದಸ್ಯರಾಗಿದ್ದಾರೆ ಎಂದು ಅವರು ಹೇಳಿದರು.
ಕಾಲ್ತುಳಿತದಿಂದ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ತಲಾ 10 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ನೀಡಲಾಗುವುದು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ದೇಗುಲ ಮಂಡಳಿಯು ಭರಿಸಲಿದೆ ಎಂದು ಸಿನ್ಹಾ ಟ್ವೀಟ್ ಮಾಡಿದ್ದಾರೆ.