ಬಂಡಾಯ ಸಾಹಿತ್ಯ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ್ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.
ಅನ್ಯಾಯ, ಅಸಮಾನತೆ, ಸರ್ವಾಧಿಕಾರದ ವಿರುದ್ಧ ಸಿಡಿಯುತ್ತಲೇ ಇದ್ದ ಹುಟ್ಟು ಬಂಡಾಯಗಾರ, ವೈಚಾರಿಕ ಗುರು ಮತ್ತು ನನ್ನ ದೀರ್ಘಕಾಲದ ಸ್ನೇಹಿತರಾಗಿದ್ದ ಪ್ರೊ.ಚಂದ್ರಶೇಖರ ಪಾಟೀಲ್ ನಿಧನ ದುಃಖವನ್ನು ತರಿಸಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.
ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹೇಳಿದ್ದಾರೆ.
ತುಂಬಲಾರದ ನಷ್ಟ : ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಾಗಿ ನಿಂತವರು. ರಾಜ್ಯದಲ್ಲಿ ಕನ್ನಡ ಭಾಷಾ ಮಾಧ್ಯಮ ಕಲಿಕೆಗೆ ಒತ್ತು ನೀಡಿದರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಅವರು ಪ್ರಾಧ್ಯಾಪಕರಾಗಿ ಚೇರ್ಮನ್ ಆಗಿ ಸೇವೆ ಸಲ್ಲಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.
ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ (ಚಂಪಾ) ಅವರು ನಿಧನರಾದ ವಿಷಯದಿಂದ ತುಂಭಾ ದುಃಖಿತನಾಗಿದ್ದೇನೆ. ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನವರಾದ ಚಂಪಾ ಅವರು ಒಬ್ಬ ಕ್ರಾಂತಿಕಾರಿ ಸಾಹಿತಿ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಕೊಡುಗೆ ಅಪಾರ ಎಂದು ಹೇಳಿದ್ದಾರೆ.
ನಾಡು-ನುಡಿಗೆ ಹೋರಾಟ – ಎಚ್.ಡಿ.ಕೆ
ಚಂಪಾ ಎಂದೇ ಸಾರಸ್ವತ ಲೋಕದಲ್ಲಿ ಹೆಸರಾಗಿದ್ದ ಅವರು ಸಾಹಿತ್ಯ ಕೃಷಿಯ ಜತೆಗೆ ನಾಡು, ನುಡಿ, ನೆಲಕ್ಕಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದರು. ಚಂಪಾ ಅವರ ಅಗಲಿಕೆ ನಾಡಿಗೆ ದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಕನ್ನಡಪರ ಹೋರಾಟಗಾರ, ಕವಿ, ನಾಟಕಕಾರ, ಸಂಘಟನಕಾರ, ಪತ್ರಕರ್ತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ವಿಶ್ರಾಂತ ಅಧ್ಯಕ್ಷರಾಗಿದ್ದ ಶ್ರೀ ಚಂದ್ರಶೇಖರ ಪಾಟೀಲ ಅವರ ನಿಧನ ಬಹಳ ದುಃಖ ಉಂಟು ಮಾಡಿದೆ ಎಂದಿದ್ದಾರೆ.