ಪ್ರಧಾನಿ ನರೇಂದ್ರ ಮೋದಿ, ಶತಕೋಟಿ ಭಾರತೀಯರನ್ನು ಸಾಂಕ್ರಾಮಿಕ ರೋಗದಿಂದ ರಕ್ಷಿಸುವ ಉದ್ದೇಶದಿಂದ ವಿಶ್ವದ ಬೃಹತ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಇಂದಿಗೆ ಒಂದು ವರ್ಷ ಪೂರೈಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕೊವಿಡ್ ಸೋಂಕು ತಡೆಗೆ ವೈದ್ಯರು, ನರ್ಸ್ ಗಳು ಮತ್ತು ಆರೋಗ್ಯ ಕಾರ್ಯಕರ್ತರು ಪ್ರಮುಖ ಪಾತ್ರ ವಹಿಸಿದ್ದು, ಅತೀ ಹಿಂದುಳಿದ ಪ್ರದೇಶಗಳಲ್ಲೂ ಲಸಿಕೆ ಹಾಕುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಶ್ಲಾಘಿಸಿದ್ದಾರೆ.
ದೇಶದಲ್ಲೇ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಕೊರೊನ ಸೋಂಕು ಪ್ರಕರಣಗಳು ಪತ್ತೆಯಾಗಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ. ಮಹಾರಾಷ್ಟ್ರದಲ್ಲಿ 71.70 ಲಕ್ಷ ಕೊರೊನ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 1.42 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ಅಂಕಿಅಂಶಗಳು ತಿಳಿಸಿವೆ.
ಕೇರಳ ಎರಡನೇ ಸ್ಥಾನದಲ್ಲಿದ್ದು, ಈವರೆಗೆ 53.6 ಲಕ್ಷ ಕೊರೊನ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 50,674 ಮಂದಿ ಕೊರೊನಾಕ್ಕೆ ಬಲಿಯಾಗಿದ್ದಾರೆ.
ತಮಿಳುನಾಡಿನಲ್ಲಿ 23.2 ಲಕ್ಷ ಮಂದಿಗೆ ಸೋಂಕು ತಗುಲಿದ್ದರೆ, 36,967 ಮಂದಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದಲ್ಲಿ 21 ಲಕ್ಷ ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. ಇವರ ಪೈಕಿ 14,509 ಮಂದಿ ಕೊರೊನ ಸೋಂಕಿನಿಂದ ಮೃತಪಟ್ಟಿದ್ದಾರೆ.
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ ಕಳೆದ 365 ದಿನಗಳಲ್ಲಿ ಕರ್ನಾಟಕದಲ್ಲಿ ಒಟ್ಟು 9.14 ಕೋಟಿಗೂ ಹೆಚ್ಚು ಲಸಿಕೆಗಳನ್ನು ವಿತರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ದಿನಕ್ಕೆ ಸರಾಸರಿ 2.5 ಲಕ್ಷ ಡೋಸ್ ಗಳನ್ನು ರಾಜ್ಯದಲ್ಲಿ ವಿತರಿಸಲಾಗಿದೆ ಎಂದು ಹೇಳಿದ್ದಾರೆ.